ADVERTISEMENT

ವಿಧಾನ ಪರಿಷತ್‌ ಚುನಾವಣೆ: 7 ಅಭ್ಯರ್ಥಿಗಳಿಂದ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 1:06 IST
Last Updated 19 ಜೂನ್ 2020, 1:06 IST
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿ ಗೋವಿಂದರಾಜು ಅವರು ಗುರುವಾರ ತಮ್ಮ ನಾಮಪತ್ರವನ್ನು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಸಲ್ಲಿಸಿದರು. ಪಕ್ಷದ ಮುಖಂಡರಾದ ಎಚ್‌.ಕೆ.ಕುಮಾರಸ್ವಾಮಿ, ಬಸವರಾಜ ಹೊರಟ್ಟಿ, ಶ್ರೀನಿವಾಸ ಗೌಡ, ಎಚ್‌.ಡಿ.ಕುಮಾರಸ್ವಾಮಿ ಇದ್ದರು.
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿ ಗೋವಿಂದರಾಜು ಅವರು ಗುರುವಾರ ತಮ್ಮ ನಾಮಪತ್ರವನ್ನು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಸಲ್ಲಿಸಿದರು. ಪಕ್ಷದ ಮುಖಂಡರಾದ ಎಚ್‌.ಕೆ.ಕುಮಾರಸ್ವಾಮಿ, ಬಸವರಾಜ ಹೊರಟ್ಟಿ, ಶ್ರೀನಿವಾಸ ಗೌಡ, ಎಚ್‌.ಡಿ.ಕುಮಾರಸ್ವಾಮಿ ಇದ್ದರು.   

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಟಿಕೆಟ್ ಪಡೆದಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಏಳು ಮಂದಿ ಅಭ್ಯರ್ಥಿಗಳು ಗುರುವಾರ ಇಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.

ಮೊದಲಿಗೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್‌ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರೆ, ಬಳಿಕ ಕಾಂಗ್ರೆಸ್‌ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್‌, ನಜೀರ್‌ ಅಹಮದ್‌, ಬಿಜೆಪಿ ಅಭ್ಯರ್ಥಿಗಳಾದ ಎಂ.ಟಿ.ಬಿ.ನಾಗರಾಜ್‌, ಆರ್.ಶಂಕರ್, ಸುನಿಲ್‌ ವಲ್ಯಾಪುರೆ ಹಾಗೂ ಪ್ರತಾಪಸಿಂಹ ನಾಯಕ್‌ ನಾಮಪತ್ರ ಸಲ್ಲಿಸಿದರು.

‘ಮೇಲ್ಮನೆ ಅಂದರೆ ಅಲ್ಲಿ ಅನುಭವಿಗಳೇ ಬೇಕು. ಹೀಗಾಗಿಇಬ್ಬರು ಅನುಭವಿಗಳನ್ನೇ ಕಳುಹಿಸಲಾಗುತ್ತಿದೆ. ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಸಕ್ರಿಯ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ADVERTISEMENT

‘ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಜೆಡಿಎಸ್‌ ಪಕ್ಷವನ್ನು ಬಲಪಡಿಸುವ ಉದ್ದೇಶದೊಂದಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಗೋವಿಂದರಾಜು ಅವರಿಗೆ ಟಿಕೆಟ್‌ ನೀಡಲಾಗಿದೆ’ ಎಂದು ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.
ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

‘ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದ ಪ್ರತಾಪಸಿಂಹ ನಾಯಕ್‌, ಮಾಜಿ ಶಾಸಕ ಸುನಿಲ್‌ ವಲ್ಯಾಪುರೆ ಹಾಗೂ ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ಶಂಕರ್ ಮತ್ತು ನಾಗರಾಜ್‌ ಅವರಿಗೆ ಟಿಕೆಟ್‌ ನೀಡಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.