ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ಮಳವಳ್ಳಿ ತಾಲ್ಲೂಕಿನ ಮೆಹದಿ ನಗರದ ಜಾವೀದ್ ಪಾಷ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
‘ನನ್ನ ವಿರುದ್ಧ ಮಂಡ್ಯ ಜಿಲ್ಲೆಯ ಕಿರುಗಾವಲು ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ನನ್ನ ಬಂಧನವನ್ನು ಅಕ್ರಮ ಎಂದು ಘೋಷಿಸಬೇಕು’ ಎಂದು ಕೋರಿ ಜಾವೀದ್ ಪಾಷ (34) ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
ಪ್ರಕರಣವೇನು?:
‘ಎಐ ತಂತ್ರಜ್ಞಾನದ ಮೂಲಕ ವಿರೂಪಗೊಳಿಸಲಾದ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಮತ್ತು ಕೆಲವು ಪದಗಳನ್ನು ಬಳಸಲಾದ ಅವಹೇಳನಕಾರಿ ಪೋಸ್ಟ್ ಅನ್ನು ಜಾವೀದ್ ಪಾಷ 2025ರ ಮೇ 8ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ’ ಎಂಬ ಆರೋಪದಡಿ ಕಿರುಗಾವಲಿನ ಮಹೇಶ್ ಕಿರುಗಾವಲು ಪೊಲೀಸ್ ಠಾಣೆಗೆ ಮೇ 9ರಂದು ದೂರು ನೀಡಿದ್ದರು. ಈ ದೂರು ಆಧರಿಸಿ ಭಾರತೀಯ ದಂಡ ಸಂಹಿತೆ–1860ರ ಕಲಂ 152, 192 ಮತ್ತು 340ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಜಾವೀದ್ ಪಾಷ ಅವರನ್ನು ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.