@BYVijayendra
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು ಎಂದು ಬಿ.ವೈ. ವಿಜಯೇಂದ್ರ ಸಂತಸ ಹಂಚಿಕೊಂಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಅವರು, ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಪ್ರಧಾನಿ ಮೋದಿಯವರ ಕಾರ್ಯಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದು ತಿಳಿಸಿದ್ದಾರೆ.
‘ಮೋದಿ ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಅವರು ಆಡಿದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯಕ್ಕೆ ಪ್ರೇರಣೆ ನೀಡಿತು' ಎಂದು ಹೇಳಿದ್ದಾರೆ.
‘ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗಳು ಸೂಚಿಸಿದರು. ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು' ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.