ADVERTISEMENT

ಮುಂಗಾರು ತೀವ್ರ: 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 14:04 IST
Last Updated 18 ಜೂನ್ 2021, 14:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ತೀವ್ರಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಜೂ.21ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂ.19ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 4.8 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದೂ ಇಲಾಖೆ ಎಚ್ಚರಿಸಿದೆ.

‘ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ‘ಆರೆಂಜ್ ಅಲರ್ಟ್‌’ ಹಾಗೂ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

ADVERTISEMENT

ಮಳೆ–ಎಲ್ಲಿ, ಎಷ್ಟು?: ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 21 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸಿದ್ದಾಪುರ 12, ಮಡಿಕೇರಿ 11, ಕುಂದಾಪುರ 9, ಸೊರಬ 8, ಸಾಗರ 7, ಬೆಳ್ತಂಗಡಿ 6, ಬೆಳಗಾವಿ, ಸಕಲೇಶಪುರ 5, ಮೂಡುಬಿದರೆ, ಪುತ್ತೂರು, ಕಾರವಾರ 4, ಭಟ್ಕಳ, ಹಾವೇರಿ, ಭದ್ರಾವತಿ, ಶಿವಮೊಗ್ಗ 3, ಮಂಗಳೂರು, ಧಾರವಾಡ, ತರೀಕೆರೆ, ಹಾಸನದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.