ADVERTISEMENT

ರಾಜ್ಯದಲ್ಲಿ ತಗ್ಗಿದ ಮಳೆ: ಕೃಷಿ ಚಟುವಟಿಕೆ ಬಿರುಸು

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 19:31 IST
Last Updated 21 ಜುಲೈ 2020, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಮಳೆಯ ಅಬ್ಬರ ಮಂಗಳವಾರ ತಗ್ಗಿದ್ದು, ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ. ಕೆಲವೆಡೆ ತುಂತುರು ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ಕಡಲ್ಕೊರೆತದಿಂದ ಒಂದು ತೆಂಗಿನ ಮರ, ತಡೆಗೋಡೆ ಸಮುದ್ರ ಪಾಲಾಗಿದ್ದು, 4 ತೆಂಗಿನ ಮರ ಹಾಗೂ 3 ವಿದ್ಯುತ್ ಕಂಬಗಳು ಅಪಾಯಕ್ಕೆ ಸಿಲುಕಿವೆ. ಪಡುಬಿದ್ರಿ, ಕಾಪು ಬೀಚ್‌ಗಳಲ್ಲೂ ಕಡಲ್ಕೊರೆತ ತೀವ್ರಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ಕೆಲವೆಡೆ ಹದ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹದ ಮಳೆಯಾಗಿದೆ. ಶಿವಮೊಗ್ಗದ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ಜೋರಾಗಿ ಸುರಿದಿದೆ.

ADVERTISEMENT

ನಾಳೆಯಿಂದ ಭಾರಿ ಮಳೆ ಸಾಧ್ಯತೆ: ರಾಜ್ಯದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಜುಲೈ 23ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 22ರಂದು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ತಗ್ಗಲಿದ್ದು, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಗುರುವಾರದಂದು ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.