ADVERTISEMENT

ಎಂಎಸ್‌ಎಂಇ ಉತ್ತೇಜನಕ್ಕೆ ಆದ್ಯತೆ: ಬಿ.ಎಸ್‌. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 20:02 IST
Last Updated 27 ಜೂನ್ 2020, 20:02 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ‘ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್‌ಎಂಇ) ಕ್ಷೇತ್ರಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಕೈಗಾರಿಕಾ ನೀತಿಗೆ ಬದಲಾವಣೆ ಸೇರಿದಂತೆ ಹಲವು ಕ್ರಮಗಳನ್ನು ರಾಜ್ಯ ಸರ್ಕಾರ ಈಗಾಗಲೇ ತೆಗೆದುಕೊಂಡಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಆರ್ಥಿಕತೆ ಸುಧಾರಿಸಲು ಎಂಎಸ್‌ಎಂಇ ಕ್ಷೇತ್ರದಲ್ಲಿ ಆಗಬೇಕಾಗಿರುವುದೇನು ಎಂಬುದರ ಕುರಿತು ಕೇಂದ್ರ ಭೂಸಾರಿಗೆ ಹಾಗೂ ಎಂಎಸ್‌ಎಂಇ ಸಚಿವ ನಿತಿನ್ ಗಡ್ಕರಿ ಅವರು ದೆಹಲಿಯಿಂದ ವಿಡಿಯೊ ಸಂವಾದ ನಡೆಸಿದರು.

ಸಂವಾದದಲ್ಲಿ ಮಾತನಾಡಿದ ಯಡಿಯೂರಪ್ಪ, ‘ಕೊರೊನಾ ಕಾರಣದಿಂದ ಎಂಎಸ್ಎಂಇ ಕ್ಷೇತ್ರ ಕುಸಿತ ಕಂಡಿದೆ.ದೇಶದ ಹಾಗೂ ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಆರ್ಥಿಕತೆ ಸುಧಾರಿಸುವ ನಿಟ್ಟಿನಲ್ಲಿ ಈ ಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. ಅದನ್ನು ಗಮನದಲ್ಲಿಟ್ಟು ಕೈಗಾರಿಕಾಸ್ನೇಹಿ ರಾಜ್ಯವನ್ನಾ ಗಿಸಲು ಅಗತ್ಯವಿದ್ದ ಭೂಸುಧಾರಣೆ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಅಡ್ಡಿಯಾಗಿದ್ದ ಹಲವು ನಿಯಮಗಳನ್ನು ಸರಳೀಕರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ’ ಎಂದರು.

ADVERTISEMENT

‘ಸ್ಥಳೀಯವಾಗಿ ಉತ್ಪಾದಿಸಿ ಎಂಬ ಪ್ರಧಾನಿಯವರ ಘೋಷಣೆಗೆ ಪೂರ ಕವಾಗಿ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯಮ ಸ್ನೇಹಿ ನೀತಿ, ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಆರ್ಥಿಕತೆಗೆ ಬಲ ತುಂಬಲು ಕೇಂದ್ರ ನೀಡುವ ಸಲಹೆಗಳನ್ನು ಸರ್ಕಾರ ಅನುಷ್ಠಾನಕ್ಕೆ ತರಲು ಬದ್ಧವಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.