ADVERTISEMENT

ಎಂಎಸ್‌ಪಿ: ಖರೀದಿ ಕೇಂದ್ರ ಹೆಚ್ಚಿಸಲು ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 28 ಮೇ 2025, 16:31 IST
Last Updated 28 ಮೇ 2025, 16:31 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ರೈತರ ಉತ್ಪನ್ನಗಳ ಶಾಶ್ವತ ಖರೀದಿ ಕೇಂದ್ರಗಳ ಸ್ಥಾಪನೆ, ಬೆಳೆಗಳನ್ನು ಬೆಳೆಯುವ ಸ್ವರೂಪ ಹಾಗೂ ಆಹಾರ ಧಾನ್ಯಗಳ ಇಳುವರಿ ಪ್ರಮಾಣದ ಕುರಿತು ಆಯಾ ಜಿಲ್ಲಾಧಿಕಾರಿಗಳು ವೈಜ್ಞಾನಿಕ ಅಧ್ಯಯನ ನಡೆಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ, ‘ಕರ್ನಾಟಕ ರೈತ ಸೇನೆ’ ಅಧ್ಯಕ್ಷ ವಿರೇಶ್ ಸಿ. ಸೊಬರದಮಠ ಸ್ವಾಮೀಜಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದ್ದು, ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಕೆಲವು ನಿರ್ದೇಶನಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ADVERTISEMENT

‘ಸಾಂಪ್ರದಾಯಿಕ ಕೊಯ್ಲುಗಳ ನಂತರವೂ ಬೆಳೆಗಳನ್ನು ಬೆಳೆಯುವ ಈಗಿನ ಸಂದರ್ಭದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಸಮರ್ಪಕ ಪ್ರಮಾಣದಲ್ಲಿ ಮಾರಾಟ ಮಾಡಲು ಮತ್ತು ಮಧ್ಯವರ್ತಿಗಳಿಂದ ತಪ್ಪಿಸಿಕೊಳ್ಳಲು ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ತೆರೆಯಬೇಕು. ಅವುಗಳು ಕೇಂದ್ರ ಸರ್ಕಾರ ನಿಗದಿಪಡಿಸಿದ ಅವಧಿಗಿಂತ 2 ತಿಂಗಳು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

‘ನಿರ್ದಿಷ್ಟ ಪ್ರದೇಶದ ಭೌಗೋಳಿಕ ಸ್ಥಿತಿಗತಿ ಹಾಗೂ ಅಲ್ಲಿ ಉತ್ಪಾದಿಸಲಾಗುವ ಆಹಾರ ಧಾನ್ಯಗಳ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಕನಿಷ್ಠ ಬೆಂಬಲ ಯೋಜನೆಯ ಉದ್ದೇಶಗಳನ್ನು ಸಫಲಗೊಳಿಸಲು ಕೇಂದ್ರ ಸರ್ಕಾರ ನಿಗದಿಪಡಿಸಿದ ಅವಧಿಯ ಹೊರತಾಗಿಯೂ ರಾಜ್ಯ ಸರ್ಕಾರ ಹೆಚ್ಚುವರಿ ಅವಧಿಗೆ ಖರೀದಿ ಕೇಂದ್ರಗಳನ್ನು ತೆರೆಯಲು ಅಧಿಕಾರ ಹೊಂದಿರುತ್ತದೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

‘ಈಗಿರುವ ಖರೀದಿ ಕೇಂದ್ರಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲ. ಆದ್ದರಿಂದ, ಬೇಡಿಕೆಯನ್ನು ಈಡೇರಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಗತ್ಯ ಸಂಖ್ಯೆಯಲ್ಲಿ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ಅವುಗಳ ಕಾರ್ಯನಿರ್ವಹಣೆಗೆ ಅನುವು ಮಾಡಿಕೊಡಬೇಕು’ ಎಂದು ನಿರ್ದೇಶಿಸಿದೆ.

ಮನವಿ ಏನಿತ್ತು?: ‘ಕನಿಷ್ಠ ಬೆಂಬಲ ಯೋಜನೆಯಡಿ (ಎಂಎಸ್‌ಪಿ) ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಈಗಾಗಲೇ ಸ್ಥಾಪಿಸಲಾಗಿರುವ ಖರೀದಿ ಕೇಂದ್ರಗಳನ್ನು ವರ್ಷದ 365 ದಿನಗಳ ಕಾಲ ಶಾಶ್ವತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ನಿರ್ದೇಶಿಸಬೇಕು ಮತ್ತು ಪ್ರತಿ ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.