ADVERTISEMENT

ಮುಡಾ ಪ್ರಕರಣ: ಮೇಲ್ಮನವಿ ಸಲ್ಲಿಸಿದ ಇ.ಡಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2025, 16:21 IST
Last Updated 10 ಮಾರ್ಚ್ 2025, 16:21 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ಅರ್ಜಿಯನ್ನು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ಕುರಿತಂತೆ ಇ.ಡಿ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗಿದ್ದು, ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಬೇಕು’ ಎಂದು ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಏಪ್ರಿಲ್‌ 8ಕ್ಕೆ ಮುಂದೂಡಿತು.

ADVERTISEMENT

‘ಜಾರಿ ನಿರ್ದೇಶನಾಲಯ (ಇ.ಡಿ) ನನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ದಾಖಲು ಮಾಡಿಕೊಂಡಿರುವ ನನ್ನ ಹೇಳಿಕೆ ಕಾನೂನು ಬಾಹಿರ’ ಎಂದು ಆಕ್ಷೇಪಿಸಿ ನಟೇಶ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿತ್ತು.

ಪಿವಿಆರ್‌ ಸಿನಿಮಾಸ್‌ಗೆ 1 ಲಕ್ಷ ದಂಡ: ಹೈಕೋರ್ಟ್‌ ತಡೆ

ಬೆಂಗಳೂರು: ‘ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶಿಸಲಿಲ್ಲ’ ಎಂದು ಆರೋಪಿಸಲಾದ ಪ್ರಕರಣದಲ್ಲಿ ಪಿವಿಆರ್‌ ಸಿನಿಮಾಸ್‌ಗೆ ₹1 ಲಕ್ಷ ದಂಡ ವಿಧಿಸಿದ್ದ ಬೆಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಆಯೋಗದ ಆದೇಶವನ್ನು ಪ್ರಶ್ನಿಸಿ ‘ಭಾರತೀಯ ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್‌’ನ ಅಧಿಕೃತ ಪ್ರತಿನಿಧಿ ಶಂತನು ಪೈ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಆಯೋಗವು ತನ್ನ ವ್ಯಾಪ್ತಿ ಮೀರಿ ಆದೇಶ ಹೊರಡಿಸಿದೆ. ಈ ಆದೇಶವನ್ನೇ ಮುಂದು ಮಾಡಿಕೊಂಡು ಕೆಲ ಕಿಡಿಗೇಡಿಗಳು ನಮಗೆ ತೊಂದರೆ ನೀಡು‌ತ್ತಿದ್ದಾರೆ’ ಎಂದು ಆಕ್ಷೇಪಿಸಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಈ ಪ್ರಕರಣದಲ್ಲಿ ಆಯೋಗವು ಹೊರಡಿಸಿರುವ ಆದೇಶ ನ್ಯಾಯಸಮ್ಮತವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದ್ದರಿಂದ, ಆಯೋಗದ ಆದೇಶಕ್ಕೆ ತಡೆ ನೀಡಲಾಗುತ್ತಿದೆ’ ಎಂದು ಆದೇಶಿಸಿತು.

ಎಚ್‌ಡಿಕೆ ವಿರುದ್ಧ ಬಲವಂತದ ಕ್ರಮ ಬೇಡ: ಆದೇಶ ವಿಸ್ತರಣೆ

ಬೆಂಗಳೂರು: ‘ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ದೂರು ಆಧರಿಸಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ನಿರ್ದೇಶಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಇದೇ 18ರವರೆಗೆ ಹೈಕೋರ್ಟ್‌ ವಿಸ್ತರಿಸಿದೆ.

‘ನಮ್ಮ ವಿರುದ್ಧ ಸಂಜಯನಗರ ಠಾಣೆ ಪೊಲೀಸರು  ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸುರೇಶ್‌ಬಾಬು ಸಲ್ಲಿಸಿರುವ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರು ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದರು. ಚಂದ್ರಶೇಖರ್‌ ಪರ ಹೈಕೋರ್ಟ್‌ ವಕೀಲ ವೆಂಕಟೇಶ್ ಅರಬಟ್ಟಿ ‘ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಿ 2024ರ ನವೆಂಬರ್ 6ರಂದು ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಭವಾನಿ ರೇವಣ್ಣ ಅರ್ಜಿ: ಕಾಯ್ದಿರಿಸಿದ ಆದೇಶ

ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ. ಈ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದ ನ್ಯಾಯಮೂರ್ತಿ ಪ್ರದೀಪ್ ಸಿಂಗ್‌ ಯೆರೂರು ಸೋಮವಾರ ವಿಚಾರಣೆ ನಡೆಸಿದರು.

‘ಮೈಸೂರು ಮತ್ತು ಹಾಸನ ಜಿಲ್ಲೆಗಳ ಪ್ರವೇಶ ನಿರ್ಬಂಧಿಸಿರುವ ನಿರೀಕ್ಷಣಾ ಜಾಮೀನಿನಲ್ಲಿನ ಷರತ್ತುಗಳನ್ನು ಸಡಿಲಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.