ADVERTISEMENT

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ಇ.ಡಿ ನೋಟಿಸ್

​ಪ್ರಜಾವಾಣಿ ವಾರ್ತೆ
Published 27 ಜನವರಿ 2025, 8:27 IST
Last Updated 27 ಜನವರಿ 2025, 8:27 IST
<div class="paragraphs"><p>ಸಿದ್ದರಾಮಯ್ಯ </p></div>

ಸಿದ್ದರಾಮಯ್ಯ

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ನೋಟಿಸ್ ಜಾರಿಮಾಡಿದೆ.

ADVERTISEMENT

ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ. ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರಿಗೂ ನೋಟಿಸ್ ಗಳನ್ನು ಜಾರಿಮಾಡಿದ್ದಾರೆ. ಪಾರ್ವತಿ ಅವರಿಗೆ ಜನವರಿ 3ರಂದು ಮೊದಲ ನೋಟಿಸ್ ನೀಡಿದ್ದು, ಜ.9ಕ್ಕೆ ಇ.ಡಿ. ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಪುನಃ ಜ.24ರಂದು ಎರಡನೇ ನೋಟಿಸ್ ಜಾರಿಮಾಡಲಾಗಿದೆ.

ದಾಖಲೆ ಸಂಗ್ರಹದ ಅಗತ್ಯವಿದೆ ಎಂಬ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿ ಪಾರ್ವತಿ ಅವರು ಇ.ಡಿ. ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ವಯಸ್ಸಿನ ಕಾರಣದಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆಯೂ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೈರತಿ ಸುರೇಶ್ ಅವರಿಗೂ ಮುರಳಿಕೃಷ್ಣನ್ ನೋಟಿಸ್ ಜಾರಿಗೊಳಿದ್ದಾರೆ‌. ನೋಟಿಸ್ ಬಂದಿರುವುದನ್ನು ಸ್ವತಃ ಸಚಿವ ಸುರೇಶ್ ಅವರೇ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

ತಮ್ಮ ಪತ್ನಿಗೆ ಇ.ಡಿ. ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಅವರೂ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.