ADVERTISEMENT

ಮುಡಾ: ಇ.ಡಿ ಸಮನ್ಸ್‌ಗೆ ತಡೆ ಆದೇಶ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2025, 16:13 IST
Last Updated 10 ಫೆಬ್ರುವರಿ 2025, 16:13 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರಿಗೆ ಇ.ಡಿ (ಜಾರಿ ನಿರ್ದೇಶನಾಲಯ) ಜಾರಿ ಮಾಡಿರುವ ಸಮನ್ಸ್‌ಗೆ ವಿಧಿಸಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್‌ ವಿಸ್ತರಿಸಿದೆ.

ಈ ಸಂಬಂಧ ಪಾರ್ವತಿ ಹಾಗೂ ಬೈರತಿ ಸುರೇಶ್‌ ಪ್ರತ್ಯೇಕವಾಗಿ ಸಲ್ಲಿಸಿರುವ ರಿಟ್‌ ಅರ್ಜಿಗಳನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸೋಮವಾರ ವಿಚಾರಣೆ ನಡೆಸಿದರು. 

ವಿಚಾರಣೆ ವೇಳೆ ಬೈರತಿ ಸುರೇಶ್‌ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ಮತ್ತು  ಪಾರ್ವತಿ ಅವರ ಪರ ಹಿರಿಯ ವಕೀಲ ಸಂದೇಶ್‌ ಜೆ.ಚೌಟ ಸುದೀರ್ಘ ವಾದ ಮಂಡಿಸಿ, ‘ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ಅವರಿಗೆ ಇ.ಡಿ ಜಾರಿ ಮಾಡಿದ್ದ ಸಮನ್ಸ್‌ ಅನ್ನು ಇದೇ ಹೈಕೋರ್ಟ್‌ನ ಸಮನ್ವಯ ಪೀಠ ವಜಾಗೊಳಿಸಿದೆ. ಅದೇ ತೀರ್ಪನ್ನು ಈ ಅರ್ಜಿದಾರರ ಪ್ರಕರಣದಲ್ಲೂ ಪರಿಗಣಿಸಬೇಕು’ ಎಂದು ಕೋರಿದರು.

ADVERTISEMENT

ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಅರವಿಂದ ಕಾಮತ್‌ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿತು.

ಸಿಎಸ್‌ಬಿ ರಚನೆ: ಸರ್ಕಾರಕ್ಕೆ ತರಾಟೆ

ಬೆಂಗಳೂರು: ನಿರ್ದಿಷ್ಟ ಸ್ಥಳ ಮತ್ತು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುವ ಐಎಎಸ್ ಅಧಿಕಾರಿಗಳ ಕನಿಷ್ಠ ಸೇವಾವಧಿಯನ್ನು ನಿಗದಿಪಡಿಸುವ ಮತ್ತು ಕರ್ತವ್ಯ ನಿರ್ವಹಣೆಯ ವೇಳೆ ಅವರ ಹಿತಕಾಯುವ ಉದ್ದೇಶ ಹೊಂದಿದ, ‘ನಾಗರಿಕ ಸೇವಾ ಮಂಡಳಿ’ (ಸಿಎಸ್‌ಬಿ) ಕುರಿತು ನಿರ್ಧಾರ ಕೈಗೊಳ್ಳಲು ಯಾವುದೇ ರಾಕೆಟ್‌ ತಂತ್ರಜ್ಞಾನ ಬೇಕಾಗಿಲ್ಲ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ.

ಈ ಸಂಬಂಧ ಹೈಕೋರ್ಟ್‌ ವಕೀಲ ರಿಷಬ್ ಟ್ರಕ್ರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಿಎಸ್‌ಬಿ ರಚಿಸುವುದಕ್ಕೆ ಸಂಬಂಧಿಸಿದಂತೆ 2014ರಲ್ಲಿ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಅಮಾನತಿಲ್ಲಿಟ್ಟಿದೆ. ನಂತರ ಸಿಎಸ್‌ಬಿ ರಚಿಸುವಂತೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ನಿರ್ದೇಶಿಸಿದೆಯಾದರೂ ಈತನಕ ರಚನೆ ಮಾಡಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ರಾಜ್ಯ ಸರ್ಕಾರದ ಪರ ವಕೀಲರು, ‘ಈ ವಿಚಾರವನ್ನು ಸಂಪುಟ ಸಮಿತಿಯ ಪರಿಶೀಲನೆಗೆ ಕಳುಹಿಸಲಾಗಿದೆ. ಬೇರೆ ರಾಜ್ಯಗಳಿಂದಲೂ ಈ ಸಂಬಂಧ ಮಾಹಿತಿ ಕೇಳಲಾಗಿದೆ. ಪರಿಣಾಮಕಾರಿಯಲ್ಲದ ನಿರ್ಧಾರ ಕೈಗೊಳ್ಳಬಾರದು ಎಂಬ ಹಿನ್ನೆಲೆಯಲ್ಲಿ ತಡವಾಗಿದ್ದು, ನಾಲ್ಕು ವಾರ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಈ ವಿವರಣೆಗೆ ಕೆರಳಿದ ನ್ಯಾಯಮೂರ್ತಿ ಅರುಣ್‌ ಅವರು, ‘ವಾಸ್ತವವಾಗಿ ಏನು ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆಳವಾಗಿ ಬೇರೂರಿರುವ ಭ್ರಷ್ಟಾಚಾರವನ್ನು ತೊಡೆದು ಹಾಕಲು ಅಧಿಕಾರಿಯೊಬ್ಬರಿಗೆ ನಿರ್ದಿಷ್ಟ ಸೇವಾ ಭದ್ರತೆ ಒದಗಿಸಬೇಕು. ರಾಜ್ಯದ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಆಡಳಿತಾತ್ಮಕ ನಿರ್ಧಾರ ಇದಕ್ಕಾಗಿ ನೀವು ಬೇರೆ ಕಡೆಯಿಂದ ಮಾಹಿತಿ ಪಡೆಯಬೇಕಿಲ್ಲ’ ಎಂದು ಕಿಡಿ ಕಾರಿದರು.

‘ಸಿಎಸ್‌ಬಿ ರಚಿಸುವ ನಿಟ್ಟಿನಲ್ಲಿ ಏನಾಗಿದೆ ಎಂಬ ಬಗ್ಗೆ ಮಾಹಿತಿ ಒದಗಿಸಿ’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್‌ 21ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.