ADVERTISEMENT

ಮುಡಾ: ಇ.ಡಿ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2025, 21:58 IST
Last Updated 2 ಏಪ್ರಿಲ್ 2025, 21:58 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಾಗಿದ್ದ ಡಿ.ಬಿ ನಟೇಶ್‌ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊರಡಿಸಿದ್ದ ಸಮನ್ಸ್‌ ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ, ಪ್ರಕರಣದ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಅನುಮತಿ ನೀಡಿದೆ.

‘ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿ ಇ.ಡಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಲೇವಾರಿ ಮಾಡಿದೆ.

ADVERTISEMENT

‘ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಲಾಗದು. ಇದೇ ವೇಳೆ ಪ್ರಕರಣದಲ್ಲಿ ಇತರೆ ಆರೋಪಿಗಳ ವಿರುದ್ಧದ ತನಿಖೆಯನ್ನು ನಿರ್ಬಂಧಿಸಲೂ ಆಗದು. ನಟೇಶ್‌ ಅವರ ಮನೆಯಲ್ಲಿ ಶೋಧ ಕಾರ್ಯ ಕೈಗೊಂಡ ವೇಳೆ ವಶಪಡಿಸಿಕೊಂಡಿರುವ ದಾಖಲೆ ಹಾಗೂ ಅವರ ಹೇಳಿಕೆಯನ್ನು ತನಿಖೆಗೆ ಬಳಸಬಹುದು’ ಎಂದು ನ್ಯಾಯಪೀಠ ವಿವರಿಸಿದೆ.

‘ಪ್ರಶ್ನಿಸಲಾಗಿರುವ ಏಕಸದಸ್ಯ ಪೀಠದ ಆದೇಶಕ್ಕೆ ಹೊರತಾಗಿ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ–2002ರ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆಗೆ ಅನುಮತಿ ನೀಡಲಾಗಿದೆ. ಹೀಗಾಗಿ, ಇ.ಡಿ ಕಾನೂನಿನ್ವಯ ತನಿಖೆ ನಡೆಸುವ ಅರ್ಹತೆ ಹೊಂದಿದೆ. ಈ ನೆಲೆಯಲ್ಲಿ ಮಧ್ಯಂತರ ಅರ್ಜಿಯನ್ನು ವಿಲೇವಾರಿ ಮಾಡಲಾಗಿದೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರರೂಪದಲ್ಲಿ 14 ಬದಲಿ ನಿವೇಶನ ಹಂಚಿಕೆ ಮಾಡಿದಾಗ, ನಟೇಶ್ ಅವರು ಮುಡಾದ ಆಯುಕ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.