ಸಿದ್ದರಾಮಯ್ಯ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಇನ್ನಿಬ್ಬರಿಗೆ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್ ನೀಡುವ ಸಾಧ್ಯತೆ ಇದೆ.
ಪ್ರಮುಖದ ದೂರುದಾರ ಸ್ನೇಹಿಮಯಿ ಕೃಷ್ಣ ಅವರಿಗೆ, ಪ್ರಕರಣದ ತನಿಖಾಧಿಕಾರಿಯೂ ಆಗಿರುವ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ನೀಡಿರುವ ನೋಟಿಸ್ ಇದನ್ನು ಪುಷ್ಟೀಕರಿಸುವಂತಿದೆ.
‘ತನಿಖಾ ವರದಿಯನ್ನು ತಾವು ವಿರೋಧಿಸುವುದಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ನ್ಯಾಯಾಲಯದಲ್ಲಿ ತಮ್ಮ ವಿರೋಧ ದಾಖಲಿಸಬಹುದು. ಇಲ್ಲದಿದ್ದರೆ, ನಾಲ್ವರು ಆರೋಪಿಗಳ ವಿರುದ್ಧದ ಆರೋಪ ಸಾಬೀತುಪಡಿಸುವ ಸಾಕ್ಷ್ಯಾಧಾರಗಳು ಇಲ್ಲ ಎಂಬ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ’ ಎಂದೂ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.
‘ಪ್ರಕರಣದ ನಾಲ್ವರು ಆರೋಪಿಗಳಾದ ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ವಿರುದ್ಧದ ಆರೋಪಗಳನ್ನು ಸಾಬೀತು ಮಾಡುವಂತಹ ಸಾಕ್ಷ್ಯಗಳು ತನಿಖೆ ವೇಳೆ ಪತ್ತೆಯಾಗಿಲ್ಲ. ಇದು ಸಿವಿಲ್ ಸ್ವರೂಪದ ಪ್ರಕರಣವಾಗಿದೆ. ಕಾನೂನಿನ ತಪ್ಪು ತಿಳಿವಳಿಕೆಯಿಂದ ಆಗಿರುವಂತಹದ್ದಾಗಿದೆ. ತನಿಖೆ ನಡೆಸಲು ಮತ್ತು ಕ್ರಮ ತೆಗೆದುಕೊಳ್ಳಲು ತಕ್ಕುದಾದ ಪ್ರಕರಣವಾಗಿರುವುದಿಲ್ಲ. ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ’ ಎಂದು ವಿವರಿಸಿದ್ದಾರೆ.
ಈ ಪ್ರಕರಣದ ತನಿಖೆ ನಡೆಸಿದ್ದ ಉದೇಶ್ ಅವರು ನ್ಯಾಯಾಲಯದ ಆದೇಶದಂತೆ ಈ ಹಿಂದೆಯೇ 550 ಪುಟಗಳ ತನಿಖಾ ವರದಿಯನ್ನು ಲೋಕಾಯುಕ್ತ ಎಡಿಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿಯ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದು ವರದಿ: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ರಿಂದ 2024ರವರೆಗೆ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಪರಿಹಾರಾತ್ಮಕ ನಿವೇಶನಗಳ ಆರೋಪದ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಹೆಚ್ಚುವರಿ ಅಂತಿಮ ವರದಿಯನ್ನು ಸಲ್ಲಿಸಲಾಗುವುದು’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ನ್ಯಾಯಾಲಯಕ್ಕೆ ಯಾವ ದಿನ ಅಂತಿಮ ವರದಿ ಸಲ್ಲಿಸಲಾಗುತ್ತದೆ ಎಂಬುದನ್ನು ತನಿಖಾಧಿಕಾರಿ ಹೇಳಿಲ್ಲ. ಈ ಕುರಿತು ಪ್ರತಿಕ್ರಿಯೆಗೆ ಟಿ.ಜೆ. ಉದೇಶ್ ದೂರವಾಣಿ ಸಂಪರ್ಕಕ್ಕೆ ಲಭ್ಯವಾಗಲಿಲ್ಲ.
‘ಮೈಸೂರು ತಾಲ್ಲೂಕಿನ ಕೆಸರೆ ಗ್ರಾಮದ 3.16 ಎಕರೆ ಜಮೀನಿಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಮುಡಾ ಅಕ್ರಮವಾಗಿ ಬದಲಿ ನಿವೇಶನಗಳನ್ನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಬೀರಿದ್ದು, ತನಿಖೆ ನಡೆಸಬೇಕು’ ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದರು. ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ನ್ಯಾಯಾಲಯವು ಕಳೆದ ಸೆಪ್ಟೆಂಬರ್‌ನಲ್ಲಿ ಆದೇಶಿಸಿತ್ತು.
ನಾಲ್ವರು ತನಿಖಾಧಿಕಾರಿಗಳ ನೇತೃತ್ವದ ತಂಡವು ಐದು ತಿಂಗಳು ಪ್ರಕರಣದ ತನಿಖೆ ನಡೆಸಿದ್ದು, ಸಿದ್ದರಾಮಯ್ಯ ಸೇರಿದಂತೆ ಹಾಲಿ– ಮಾಜಿ ಜನಪ್ರತಿನಿಧಿಗಳು, ಅಧಿಕಾರಿಗಳು ಸಹಿತ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಿತ್ತು.
‘ಲೋಕಾಯುಕ್ತ ಅಧಿಕಾರಿಗಳ ಮೇಲಿನ ನಮ್ಮ ಅನುಮಾನ ನಿಜವಾಗಿದೆ. ಸಾಕ್ಷ್ಯಾಧಾರಗಳನ್ನು ಕೊಟ್ಟಿದ್ದರೂ ಸೂಕ್ತ ತನಿಖೆ ನಡೆಸಿಲ್ಲ. ಆತ್ಮಸಾಕ್ಷಿ ಮಾರಿಕೊಂಡ ಅಧಿಕಾರಿಗಳಷ್ಟೇ ಇಂತಹ ವರದಿ ನೀಡಲು ಸಾಧ್ಯ’ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯಿಸಿದರು.
‘ಬಿ– ರಿಪೋರ್ಟ್ ನೀಡುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಒಂದು ವಾರದಲ್ಲಿ ನೋಟಿಸ್‌ಗೆ ತಕರಾರು ಸಲ್ಲಿಸಿ, ನ್ಯಾಯಾಲಯದಲ್ಲಿ ನನ್ನ ಆರೋಪವನ್ನು ಸಾಬೀತು ಮಾಡುತ್ತೇನೆ’ ಎಂದರು. ‘50:50 ಅನುಪಾತದ ತನಿಖೆಯನ್ನು ಇನ್ನೂ ಪೂರ್ಣಗೊಳಿಸಿಲ್ಲ. ತರಾತುರಿಯಲ್ಲಿ ಅಂತಿಮ ವರದಿ ಸಲ್ಲಿಸುತ್ತಿರುವುದು ಕಾನೂನಿನ ಉಲ್ಲಂಘನೆ. ಪಾರ್ವತಿ ಅವರಿಗೆ 50:50 ಅನುಪಾತದ ಅಡಿ ನಿವೇಶನ ಹಂಚಿಕೆ ಅಧಿಸೂಚನೆಯ ದಾಖಲೆ ನೀಡಿದರೆ ನಾನು ಹೋರಾಟ ನಿಲ್ಲಿಸಿ ಜೈಲಿಗೆ ಹೋಗಲು ಸಿದ್ಧ’ ಎಂದು ಹೇಳಿದರು.
ಒಂದೇ ಒಂದು ದಿನ ನೆಪಮಾತ್ರಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯನ್ನು ವಿಚಾರಣೆ ನಡೆಸಿ ಕ್ಲೀನ್ ಚಿಟ್ ನೀಡಿರುವುದು ರಾಜ್ಯ ಕಂಡ ‘ಐತಿಹಾಸಿಕ ದುರಂತ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
‘ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ‘ನ್ಯಾಯ’ ಮಣ್ಣುಪಾಲಾಗಿದೆ. ಸಮರ್ಪಕ ತನಿಖೆಯನ್ನೇ ನಡೆಸದೆ ಕ್ಲೀನ್ ಚಿಟ್ ನೀಡಿ ‘ನ್ಯಾಯದ ಸಮಾಧಿ’ ಮಾಡಿದೆ. ಕೋರ್ಟಿಗೆ ಸಾಕ್ಷ್ಯ ಒದಗಿಸದೆ ಪ್ರಕರಣ ಮುಚ್ಚಿ ಹಾಕಿ ಸತ್ಯದ ಸಮಾಧಿ ಮಾಡುವ ಸಿದ್ದರಾಮಯ್ಯನವರ ಪ್ರಯತ್ನಕ್ಕೆ ಜಯ ಸಿಗುವುದಿಲ್ಲ’ ಎಂದಿದ್ದಾರೆ.
‘ಮುಖ್ಯಮಂತ್ರಿ ಅವರಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತ. ತಾವೇ ನೇಮಿಸಿದ ಅಧಿಕಾರಿಗಳಿಂದಲೇ ನಡೆಸಲಾಗುವ ತನಿಖೆಯಲ್ಲಿ ಮುಖ್ಯಮಂತ್ರಿ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.
‘ಹಗರಣದ ಪಾರದರ್ಶಕ ತನಿಖೆ ನಡೆಯಬೇಕೆಂದರೆ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದಿಂದ ಅಂತರ ಕಾಯ್ದುಕೊಂಡ ತನಿಖಾ ಸಂಸ್ಥೆಯಿಂದ ಮಾತ್ರ ಸಾಧ್ಯ ಎಂಬುದು ನ್ಯಾಯ ನಿರೀಕ್ಷಿಸುವ ಪ್ರತಿಯೊಬ್ಬರೂ ಒಪ್ಪುವ ಮಾತು. ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.