ಆರ್. ಅಶೋಕ
ಬೆಂಗಳೂರು: 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ. ಅಷ್ಟೇ ಅಲ್ಲದೆ, ಮುಡಾದಲ್ಲಿ ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ನಿಯಮಬಾಹಿರವಾಗಿ ಹಂಚಿಕೆ ಮಾಡಲಾಗಿದೆ' ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಹೇಳಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, 'ಸೈಟ್ ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ' ಎಂದು ಪ್ರಶ್ನಿಸಿದ್ದಾರೆ.
'ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದ್ದು, ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ' ಎಂದು ಹೇಳಿದ್ದಾರೆ.
'ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ!' ಎಂದು ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.