ADVERTISEMENT

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ: ಸೆ.2ಕ್ಕೆ ಪುನಃ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 23:40 IST
Last Updated 31 ಆಗಸ್ಟ್ 2024, 23:40 IST
   

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆಯನ್ನು ಮುಂದೂಡಬೇಕು ಮತ್ತು ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು’ ಎಂಬ ಈ ಹಿಂದಿನ ಆದೇಶವನ್ನು ಹೈಕೋರ್ಟ್‌, ಸೆಪ್ಟೆಂಬರ್‌ 2ರವರೆಗೆ ಪುನಃ ವಿಸ್ತರಿಸಿದೆ.

ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶನಿವಾರ ಮುಂದುವರಿಸಿದರು.

ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ರಾಜ್ಯಪಾಲರ ಪರ ಸಾಲಿಸಿಟರ್‌ ಜನರಲ್‌ ಎಸ್‌.ತುಷಾರ್ ಮೆಹ್ತಾ ಮತ್ತು ಫಿರ್ಯಾದುದಾರ ಸ್ನೇಹಮಯಿ ಕೃಷ್ಣ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮಣಿಂದರ್‌ ಸಿಂಗ್‌ ಹಾಗೂ ಮತ್ತಿಬ್ಬರು ಫಿರ್ಯಾದುದಾರರಾದ ಸಿ.ಎಸ್‌.ಪ್ರದೀಪ್‌ ಕುಮಾರ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಮತ್ತು ಟಿ.ಜೆ.ಅಬ್ರಹಾಂ ಪರ ರಂಗನಾಥ ರೆಡ್ಡಿ ತಮ್ಮ ವಾದ ಪೂರೈಸಿದರು. 

ADVERTISEMENT

ಫಿರ್ಯಾದುದಾರರ ಪರ ವಕೀಲರು ಇನ್ನಷ್ಟು ವಾದ ಮಂಡಿಸಲು ಅವಕಾಶ ಕೋರಿದ ಮನವಿಯನ್ನು ಮನ್ನಿಸಿದ ನ್ಯಾಯಪೀಠ, ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು.

ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ಹೈಕೋರ್ಟ್‌ನ ಹಿರಿಯ ವಕೀಲ ಎ.ಎಸ್‌.ಪೊನ್ನಣ್ಣ ಕಲಾಪದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.