ADVERTISEMENT

ಮುಡಾ ಹಗರಣ: ಮುಂದುವರಿದ ತನಿಖೆಗೆ ಕೋರ್ಟ್ ಅನುಮತಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 5:10 IST
Last Updated 16 ಏಪ್ರಿಲ್ 2025, 5:10 IST
   

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಲು ಅನುಮತಿ ನೀಡಬೇಕು’ ಎಂಬ ಲೋಕಾಯುಕ್ತ ಪೋಲಿಸರ ಕೋರಿಕೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿರುವ ‘ಬಿ’ ಅಂತಿಮ ವರದಿ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ‘ವಿರೋಧದ ಅರ್ಜಿ ಸಲ್ಲಿಸಲು ನಮಗೂ ಅನುಮತಿ ನೀಡಬೇಕು’ ಎಂದು ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಗಳ ಮೇಲಿನ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಮಂಗಳವಾರ ಪ್ರಕಟಿಸಿದರು.

‘ಸೀಮಿತ ವ್ಯಾಪ್ತಿಗೆ ಜಾರಿ ನಿರ್ದೇಶನಾಲಯವನ್ನು ಬಾಧಿತ ವ್ಯಕ್ತಿ ಎಂದು ಪರಿಗಣಿಸಲಾಗಿದೆ. ಲೋಕಾಯುಕ್ತ ಪೊಲೀಸರು ನಿರ್ಣಾಯಕವಾದ ಅಂತಿಮ ವರದಿ ಸಲ್ಲಿಸುವವರೆಗೆ ‘ಬಿ ವರದಿ’ ಪರಿಗಣಿಸುವುದು ಅಥವಾ ತಿರಸ್ಕರಿಸುವ ಪ್ರಶ್ನೆಯನ್ನು ಬಾಕಿ ಉಳಿಸಲಾಗಿದೆ’ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ADVERTISEMENT

’ಮುಂದುವರಿದ ತನಿಖೆ ನಡೆಸಿ, ಮೇ 7ರ ಒಳಗಾಗಿ ಸಮಗ್ರವಾದ ನಿರ್ಣಾಯಕ ವರದಿ ಸಲ್ಲಿಸಿ’ ಎಂದು ಲೋಕಾಯುಕ್ತಕ್ಕೆ ನಿರ್ದೇಶಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದರು.

‘ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪದ ಪ್ರಕರಣದಲ್ಲಿ ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ’ ಎಂಬ ಷರಾ ಬರೆದಿರುವ ‘ಬಿ’ ಅಂತಿಮ ವರದಿಯನ್ನು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2025ರ ಫೆಬ್ರುವರಿ 20ರಂದು ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.