ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ, ಪರಿಹಾರ ಮತ್ತು ಬದಲಿ ನಿವೇಶನಗಳ ಹಂಚಿಕೆಯಲ್ಲಿನ ಅವ್ಯವಹಾರಗಳ ವಿಚಾರಣೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಆಯೋಗವು, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ನ್ಯಾಯಮೂರ್ತಿ ದೇಸಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ, ವರದಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಪರಿಹಾರದ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದ ಬೆನ್ನಲ್ಲೇ, ರಾಜ್ಯ ಸರ್ಕಾರವು ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ಆಯೋಗ ರಚಿಸಿತ್ತು. 2006ರಿಂದ 2024ರ ಜುಲೈ 15ರವರೆಗೂ ನಡೆದಿರುವ ಭೂಸ್ವಾಧೀನ, ಬಡಾವಣೆಗಳ ನಿರ್ಮಾಣ, ನಿವೇಶನ ಹಂಚಿಕೆ, ಪರಿಹಾರ ವಿತರಣೆಯ ಬಗ್ಗೆ ವಿಚಾರಣೆ ನಡೆಸುವಂತೆ ಸೂಚಿಸಿತ್ತು.
ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ (ಎರಡು ಅವಧಿ), ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್, ಸಿದ್ದರಾಮಯ್ಯ (ಎರಡು ಅವಧಿ) ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಪ್ರಾಧಿಕಾರದಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಕುರಿತು ನಡೆಸಿರುವ ವಿಚಾರಣೆಯ ವಿವರಗಳು ವರದಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.