ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 22ಕ್ಕೆ ಮುಂದೂಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ಅಸ್ತು ಎಂದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಸಿದ್ದರಾಮಯ್ಯ ಮತ್ತು ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಜಮೀನು ಮಾರಾಟ ಮಾಡಿದ್ದ ಜೆ.ದೇವರಾಜು ಸಲ್ಲಿಸಿರುವ ಮೂರು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಶನಿವಾರ ನಿಗದಿಯಾಗಿತ್ತು.
ವಿಚಾರಣೆ ವೇಳೆ, ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿರುವ ವಕೀಲ ಶತಭಿಷ ಶಿವಣ್ಣ, ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಪದಾಂಕಿತ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಖುದ್ದು ಹಾಜರಾಗಿ ವಾದ ಮಂಡಿಸಲಿದ್ದು, ಇದಕ್ಕಾಗಿ ಸಮಯಾವಕಾಶ ನೀಡಬೇಕು’ ಎಂದು ಕೋರಿದರು.
ಈ ಮನವಿಗೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ‘ನ್ಯಾಯಾಲಯಕ್ಕೆ ಅನುಕೂಲವಾಗುವ ಯಾವುದಾದರೂ ದಿನಾಂಕದಂದು ಮೇಲ್ಮನವಿಗಳ ವಿಚಾರಣೆ ನಡೆಸಬಹುದು’ ಎಂದು ದನಿಗೂಡಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್ 22ಕ್ಕೆ ನಿಗದಿಪಡಿಸಿ ಮುಂದೂಡಿತು. ಪ್ರಕರಣದ ಪ್ರತಿವಾದಿಯಾದ ರಾಜ್ಯಪಾಲರ ಪರ ಹೈಕೋರ್ಟ್ ವಕೀಲ ಕೆ.ಅಭಿಷೇಕ್ ಹಾಜರಿದ್ದರು.
ಸಿಬಿಐಗೆ ಮುಡಾ ಕೋರಿಕೆ: ನಾಳೆ ವಿಚಾರಣೆ
ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಲಾಗಿರುವ ಅರ್ಜಿ ಹೈಕೋರ್ಟ್‌ನಲ್ಲಿ ಇದೇ 27ಕ್ಕೆ ವಿಚಾರಣೆಗೆ ಬರಲಿದೆ.
ಈ ಕುರಿತು ಪ್ರಕರಣದ ದೂರುದಾರರೂ ಆದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಲಿದ್ದಾರೆ.
ಕಳೆದ ವಿಚಾರಣೆ ವೇಳೆ ನ್ಯಾಯಪೀಠವು ‘ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಬೇಕು ಮತ್ತು ಮುಂದಿನ ವಿಚಾರಣೆಯ ಮುನ್ನಾ ದಿನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ನಿರ್ದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.