ADVERTISEMENT

ಮುಡಾ: ಲೋಕಾಯುಕ್ತ ನಡೆಗೆ ಸ್ನೇಹಮಯಿ ಕೃಷ್ಣ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 7 ಮೇ 2025, 19:59 IST
Last Updated 7 ಮೇ 2025, 19:59 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಕಲಂ 17ಎ ಅಡಿ ರಾಜ್ಯ ಸರ್ಕಾರಕ್ಕೆ ಅನುಮತಿ ಕೋರಲಾಗಿದ್ದು, ಪ್ರಕರಣದ ವಿಚಾರಣೆಗೆ ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಬುಧವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ವೆಂಕಟೇಶ ಅರಬಟ್ಟಿ, ‘ಕಳೆದ ವಿಚಾರಣೆ ವೇಳೆ ನ್ಯಾಯಾಲಯ ತನಿಖೆ ಮುಂದುವರಿಕೆಗೆ ಆದೇಶಿಸಿತ್ತು. ಅದರ ಭಾಗವಾಗಿ ಕೆಲವು ಅಧಿಕಾರಿಗಳ ವಿರುದ್ಧ ತನಿಖೆಗೆ ಅನುಮತಿ ಕೋರಲಾಗಿದೆ. ಹೀಗಾಗಿ, ವಿಚಾರಣೆಗೆ ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ADVERTISEMENT

ಇದಕ್ಕೆ ಫಿರ್ಯಾದುದಾರ ಸ್ನೇಹಮಯಿ ಕೃಷ್ಣ, ‘ತನಿಖಾಧಿಕಾರಿಗಳು ಉದ್ದೇಶಪೂರ್ವಕವಾಗಿ ತನಿಖೆಗೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ತನಿಖಾ ಸಂಸ್ಥೆಯು ಅನಗತ್ಯವಾಗಿ ವಿಚಾರಣೆ ಮುಂದೂಡಿಕೆ ಕೋರುತ್ತಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡಬಾರದು. ’ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕೃಷ್ಣ ಅವರ ಆಕ್ಷೇಪಣೆಯನ್ನು ದೈನಂದಿನ ಆದೇಶದಲ್ಲಿ ದಾಖಲಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿದರು. ಅಂದು ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.