ADVERTISEMENT

ಮುಡಾ ನಿವೇಶನಗಳ ಹಂಚಿಕೆಯಲ್ಲಿ ಭಾರಿ ಹಗರಣ ನಡೆದಿದೆ: ಇ.ಡಿ.

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 21:15 IST
Last Updated 18 ಸೆಪ್ಟೆಂಬರ್ 2025, 21:15 IST
ಮುಡಾ ಕಚೇರಿ
ಮುಡಾ ಕಚೇರಿ   

ನವದೆಹಲಿ: ಮೈಸೂರಿನ ಮುಡಾ ನಿವೇಶನಗಳ ಹಂಚಿಕೆಯಲ್ಲಿ ವಿವಿಧ ಕಾನೂನುಗಳು ಮತ್ತು ಸರ್ಕಾರಿ ಆದೇಶಗಳನ್ನು ಉಲ್ಲಂಘಿಸಿ ದೊಡ್ಡ ಪ್ರಮಾಣದ ಹಗರಣ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಹೇಳಿದೆ. 

ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್ ಅವರನ್ನು ಇ.ಡಿ. ಸೆ.16ರಂದು ಬಂಧಿಸಿತ್ತು. ಅನರ್ಹ ವ್ಯಕ್ತಿಗಳಿಗೆ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ದಿನೇಶ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಇ.ಡಿ. ಆರೋಪಿಸಿದೆ. 

‘ದಿನೇಶ್‌ ಕುಮಾರ್ ಅವರು ನಿವೇಶನಗಳ ಅಕ್ರಮ ಹಂಚಿಕೆ ಮಾಡಲು ನಗದು, ಬ್ಯಾಂಕ್ ವರ್ಗಾವಣೆ, ಚರ/ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾಗಿದೆ‘ ಎಂದು ನಿರ್ದೇಶನಾಲಯ ಹೇಳಿದೆ.

ADVERTISEMENT

ನಿವೇಶನಗಳ ಅಕ್ರಮ ಹಂಚಿಕೆ ಮಾಡಲು ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿತ್ತು. ನಕಲಿ ದಾಖಲೆಗಳನ್ನು ಅಥವಾ ಅಪೂರ್ಣ ದಾಖಲೆಗಳನ್ನು ಬಳಸಿಕೊಂಡು ಹಂಚಿಕೆ ಮಾಡಲಾಗಿತ್ತು. ಸರ್ಕಾರಿ ಆದೇಶಗಳನ್ನು ಉಲ್ಲಂಘಿಸಿ ಅನರ್ಹರಿಗೆ ನಿವೇಶನ ನೀಡಲಾಗಿತ್ತು. ಕೆಲವು ಸಂದರ್ಭಗಳಲ್ಲಿ ಹಳೆಯ ದಿನಾಂಕ ನಮೂದಿಸಿ ಹಂಚಿಕೆ ಪತ್ರ ಕೊಡಲಾಗಿತ್ತು ಎಂದು ದೂರಿದೆ. 

ಇದುವರೆಗೆ ಅಕ್ರಮವಾಗಿ ಹಂಚಿಕೆ ಮಾಡಲಾದ 252 ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅವುಗಳ ಮಾರುಕಟ್ಟೆ ಮೌಲ್ಯ ಸುಮಾರು ₹400 ಕೋಟಿ ಎಂದು ನಿರ್ದೇಶನಾಲಯ ಮಾಹಿತಿ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಕಳೆದುಕೊಂಡ ಜಮೀನಿಗೆ ಪರಿಹಾರಾತ್ಮಕವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದ ತನಿಖೆ ಆರಂಭಿಸಿದ್ದ ಇ.ಡಿ, ಅನೇಕ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದನ್ನು ಪತ್ತೆ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.