ಶಾಸಕ ಮುನಿರತ್ನ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಸಾಮೂಹಿಕ ಅತ್ಯಾಚಾರ ಆರೋಪದಡಿ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಬಾರದು’ ಎಂದು ಈ ಹಿಂದೆ ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಆರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಮುನಿರತ್ನ ಪರ ವಕೀಲರು, ‘ಅರ್ಜಿದಾರರ ವಿರುದ್ಧದ ಆರೋಪ ಸಾಬೀತಾಗಿಲ್ಲ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ಬಿ ಅಂತಿಮ ವರದಿ ಸಲ್ಲಿಸಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಸಿ.ಎಸ್.ಪ್ರದೀಪ್, ‘ಎಸ್‌ಐಟಿ ವಿಚಾರಣಾ ನ್ಯಾಯಾಲಯಕ್ಕೆ ಬಿ ಅಂತಿಮ ವರದಿ ಸಲ್ಲಿಸಿರುವುದೇನೊ ಸರಿ. ಆದರೆ, ನ್ಯಾಯಾಲಯ ಅದನ್ನು ಇನ್ನೂ ಅಂಗೀಕರಿಸಿಲ್ಲ’ ಎಂದು ವಿವರಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಮಧ್ಯಂತರ ತಡೆ ಆದೇಶ ವಿಸ್ತರಿಸಿ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.