ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ₹2,000 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ 15ರಷ್ಟು ಕಮಿಷನ್ ಪಡೆದಿದ್ದಾರೆ’ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ದೂರು ಸಲ್ಲಿಸಿದ್ದಾರೆ.
‘ವಿವಿಧ ಕಾಮಗಾರಿಗಳ ಗುತ್ತಿಗೆ ನೀಡಲು ಟೆಂಡರ್ ಕರೆಯದೆ, ಪ್ರಕ್ರಿಯೆ ನಡೆಸಲಾಗುತ್ತಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಂಬಂಧಿಗಳಿಗೆ ಗುತ್ತಿಗೆ ನೀಡಲು ಮುಂದಾಗಿದ್ದು, ಡಿ.ಕೆ.ಶಿವಕುಮಾರ್ ಅವರ ಪರವಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಗುತ್ತಿಗೆದಾರರಿಂದ ಶೇ 15ರಷ್ಟು ಕಮಿಷನ್ ಈಗಾಗಲೇ ಪಡೆದಿದ್ದಾರೆ’ ಎಂದು ದೂರಿದ್ದಾರೆ.
‘ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಹ ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ರಾಜ್ಯದ ಗುತ್ತಿಗೆದಾರರ ಬಿಡ್‌ಗಳನ್ನು ಅನಗತ್ಯವಾಗಿ ತಿರಸ್ಕರಿಸುತ್ತಿದ್ದಾರೆ. ಕೆಲವು ಕಾಮಗಾರಿಗಳಲ್ಲಿ ತಮ್ಮದೇ ಬೇನಾಮಿ ಕಂಪನಿಗಳ ಮೂಲಕ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ಗುತ್ತಿಗೆ ಪಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಸ್ಟಾರ್ ಚಂದ್ರು ಅವರ ಸ್ಟಾರ್ ಬಿಲ್ಡರ್ಸ್‌ಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ₹232 ಕೋಟಿ ಮೊತ್ತದ ಕಾಮಗಾರಿಗಳ ಗುತ್ತಿಗೆ ನೀಡಿದ್ದಾರೆ. ಈ ಎಲ್ಲ ಅಕ್ರಮಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.