ADVERTISEMENT

ಸಚಿವ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 9:54 IST
Last Updated 12 ಏಪ್ರಿಲ್ 2022, 9:54 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: 'ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಮರಣ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಆರೋಪ ಹೊತ್ತಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು. ಸಚಿವ ಸ್ಥಾನದಿಂದ ವಜಾಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

'ಆರೋಪಿ ಸಚಿವನ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಶೇ 40 ಕಮಿಷನ್ ಆರೋಪ ಮಾಡಿರುವುದು ನಾವ್ಯಾರೂ ಅಲ್ಲ. ಗುತ್ತಿಗೆದಾರರ ಸಂಘ, ಗುತ್ತಿಗೆದಾರರು ಹಾಗೂ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಈ ಆರೋಪ ಮಾಡಿದ್ದಾರೆ' ಎಂದರು.

'ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಯಾರ ರಕ್ಷಣೆಯನ್ನೂ ಮಾಡಬಾರದು. ಕೇವಲ ಮೌಖಿಕವಾಗಿ ತನಿಖೆ ಮಾಡುತ್ತೇವೆ, ಸತ್ಯಾಂಶ ತಿಳಿಯುತ್ತೇವೆ ಎಂದು ಕಾಲಹರಣ ಮಾಡಬಾರದು. ಕೂಡಲೇ ಎಫ್ಐಆರ್ ದಾಖಲಿಸಿ, ಈಶ್ವರಪ್ಪನನ್ನು ಬಂಧಿಸಬೇಕು. ಈ ಹಿಂದೆ ಸಚಿವರುಗಳ ವಿರುದ್ಧದ ಪ್ರಕರಣದಲ್ಲಿ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಬಿ ರಿಪೋರ್ಟ್ ಹಾಕಿ ರಕ್ಷಣೆ ಮಾಡಿದ್ದು, ಈ ಪ್ರಕರಣದಲ್ಲಿ ಆ ರೀತಿ ಮಾಡಬಾರದು' ಎಂದು ಒತ್ತಾಯಿಸಿದರು.

ADVERTISEMENT

ಈ ಹಿಂದೆ ಇಂಥ ಪ್ರಕರಣಗಳಲ್ಲಿ ಅನೇಕ ಸಚಿವರುಗಳ ರಾಜೀನಾಮೆ ಪಡೆಯಲಾಗಿದೆ. ಈಗಲೂ ಆರೋಪ ಹೊತ್ತಿರುವ ಸಚಿವನ ವಿರುದ್ದ ಪ್ರಕರಣ ದಾಖಲಿಸಿ, ಆತನನ್ನು ವಜಾಗೊಳಿಸಬೇಕು, ಬಂಧಿಸಬೇಕು ಎಂದು ಆಗ್ರಹಿಸಿದರು.

'ಇದು ಕೇವಲ ಆತ್ಮಹತ್ಯೆ ಪ್ರಕರಣವಲ್ಲ. ಇದೊಂದು ಕೊಲೆ ಪ್ರಕರಣ. ಈ ಸಾವಿಗೆ ಕಾರಣ ಯಾರು ಎಂದು ಬರೆದಿಟ್ಟು ಸಂತೋಷ್ ಸಾವಿಗೆ ಶರಣಾಗಿದ್ದಾರೆ. ಈ ಸಾವಿಗೆ ಕಾರಣ ಏನು ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ. ಹೀಗಾಗಿ ಈಗ ರಾಜ್ಯದಲ್ಲಿ ಕಾನೂನನ್ನು ಯಾವ ರೀತಿ ಜಾರಿಗೆ ತರಲಾಗುತ್ತದೆ ಎಂಬುದಷ್ಟೇ ಈಗ ಉಳಿದಿರುವ ವಿಚಾರ' ಎಂದರು.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.