ADVERTISEMENT

ಮುರುಘಾ ಶ್ರೀ ಜಾಮೀನು ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ ವಾರ ಗಡುವು

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 6:14 IST
Last Updated 28 ಅಕ್ಟೋಬರ್ 2022, 6:14 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಬೆಂಗಳೂರು:ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ತಮ್ಮ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರ ಪರ ವಕಾಲತ್ತಿನ ಕಾನೂನು ಬದ್ಧತೆ ಪ್ರಶ್ನಿಸಿದ್ದಾರೆ.

ಈ ಸಂಬಂಧ ಮುರುಘಾ ಶ್ರೀ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮುರುಘಾ ಶ್ರೀಗಳ ಪರ ಹಾಜರಿದ್ದ ವಕೀಲೆ ಸ್ವಾಮಿನಿ ಗಣೇಶ್ ಮೋಹನಂಬಾಳ್ ಅವರು, "ಸಂತ್ರಸ್ತರ ಪರವಾಗಿ ಮಣಿ ಎಂಬುವರು ವಕಾಲತ್ತು ಸಲ್ಲಿಸಿದ್ದಾರೆ. ತಾವು ಬಾಲಕಿಯರ ಪೋಷಕರು ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ, ಈ ವಕಾಲತ್ ನಾಮೆಗೆ ಸಂತ್ರಸ್ತ ಬಾಲಕಿಯರು ಒಪ್ಪಿಗೆ ನೀಡಿರುವ ಬಗ್ಗೆ ಅಧಿಕೃತ ದಾಖಲೆಯಿಲ್ಲ" ಎಂದು ಆಕ್ಷೇಪಿಸಿದರು.

ADVERTISEMENT

"ಈ ಕುರಿತಂತೆ ಲಿಖಿತ ಆಕ್ಷೇಪಣೆ ಸಲ್ಲಿಕೆಗೆ ಸಮಯಾವಕಾಶ ನೀಡಬೇಕು" ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಒಂದು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋದಡಿ ಮುರುಘಾ ಶ್ರೀಗಳನ್ನು ಪೊಲೀಸರು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.