ಬೆಂಗಳೂರು: ‘ಲವ್ ಜಿಹಾದ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ‘ಶ್ರೀರಾಮ ಸೇನೆ’ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ತಡೆ ಒಡ್ಡಿ, ಶಿವಮೊಗ್ಗ ಜಿಲ್ಲೆಗೆ ಬಾರದಂತೆ ನಿರ್ಬಂಧ ವಿಧಿಸಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಈ ಸಂಬಂಧ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಡಿ.ಆರ್.ರವಿಶಂಕರ್ ಅವರ ವಾದ ಆಲಿಸಿದ ನ್ಯಾಯಪೀಠ, ‘ಪ್ರಮೋದ್ ಮುತಾಲಿಕ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸಬಹುದು. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಹುದು. ಆದರೆ, ಯಾವುದೇ ಪ್ರಚೋದನಾತ್ಮಕ ಭಾಷಣ ಮಾಡಬಾರದು’ ಎಂಬ ಷರತ್ತನ್ನು ವಿಧಿಸಿತು.
‘ಪ್ರಮೋದ್ ಮುತಾಲಿಕ್ ಅವರು 2025ರ ಫೆಬ್ರುವರಿ 28ರಿಂದ ಏಳು ದಿನಗಳ ಕಾಲ ಶಿವಮೊಗ್ಗ ಜಿಲ್ಲೆ ಪ್ರವೇಶಿಸಬಾರದು’ ಎಂದು ಅಲ್ಲಿನ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ನ್ಯಾಯಪೀಠ ತಡೆ ನೀಡಿತು. ಮುತಾಲಿಕ್ ಪರ ಹೈಕೋರ್ಟ್ ವಕೀಲ ಲೀಲೇಶ್ ಕೃಷ್ಣ ವಕಾಲತ್ತು ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.