ADVERTISEMENT

Mysore Dasara | ಈ ಬಾರಿ 11 ದಿನ ದಸರಾ: ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 8:34 IST
Last Updated 28 ಜೂನ್ 2025, 8:34 IST
   

ಬೆಂಗಳೂರು 'ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ಶನಿವಾರ ಅವರು ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು.

ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿಯ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ADVERTISEMENT

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಸೆ. 22ರಂದು ದಸರಾ ಹಬ್ಬಕ್ಕೆ ಚಾಲನೆ ನೀಡಲಾಗುವುದು., ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ. ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು. ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ₹ 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ನೀಡಿದ ಸಲಹೆಗಳೇನು?

  • ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು. ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

  • ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

  • ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

  • ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

  • ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

  • ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

  • ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

  • ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿ ಇರಬಾರದು.

  • ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಗೋಲ್ಡ್ ಕಾರ್ಡ್‌ ವಿತರಿಸಬೇಕು.

  • ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

  • ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

  • ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

  • ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

ಸಭೆಯಲ್ಲ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ' 'ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು ಎಂದರು.

'ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು' ಎಂದು ಶಾಸಕ-ತನ್ವೀರ್‌ ಸೇಠ್ ಸಲಹೆ ನೀಡಿದರು.

'ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು' ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಶಾಸಕರಾದ ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.