ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ(ಏರ್ ಶೋ) ಆಯೋಜಿಸಲು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಅಲ್ಲದೇ, ದಸರಾದಲ್ಲಿ ಪಾಲ್ಗೊಳ್ಳುವಂತೆ ರಾಜನಾಥ ಸಿಂಗ್ ಅವರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
‘ವೈಮಾನಿಕ ಪ್ರದರ್ಶನವು ಐತಿಹಾಸಿಕ ಉತ್ಸವದ ಭವ್ಯತೆಗೆ ಹೆಚ್ಚಿನ ಮೆರಗು ನೀಡುವುದಲ್ಲದೇ ದಸರಾ ನೋಡಲು ಬರುವ ಲಕ್ಷಾಂತರ ಜನರಲ್ಲಿ ದೇಶಭಕ್ತಿಯ ಭಾವವನ್ನು ತುಂಬುತ್ತದೆ’ ಎಂದು ತಮ್ಮ ಹೇಳಿಕೆಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
‘ನೀವು(ರಾಜನಾಥ ಸಿಂಗ್) ಈ ಕಾರ್ಯಕ್ರಮದಲ್ಲಿ ಭಾಗಿಯಾದರೆ ಅದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ. ನಿಮ್ಮ ಉಪಸ್ಥಿತಿಯು ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಗೌರವ ಮತ್ತು ಮೆಚ್ಚುಗೆಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಹೇಳಿದ್ದಾರೆ.
ಏರ್ ಶೋ ಯಾವಾಗ ಮತ್ತು ಎಲ್ಲಿ ನಡೆಸಬೇಕೆಂಬ ಬಗ್ಗೆ ಇನ್ನು ನಿಗದಿಯಾಗಿಲ್ಲ.
ದಸರಾದಲ್ಲಿ ಏರ್ ಶೋ ನಡೆಸಲು ಅನುಮತಿ ನೀಡುವಂತೆ ಕೋರಿ ಕಳೆದ ತಿಂಗಳು ರಾಜನಾಥ ಸಿಂಗ್ ಅವರನ್ನು ಖುದ್ದು ಭೇಟಿ ಮಾಡಿ ಸಿದ್ದರಾಮಯ್ಯ ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.