ADVERTISEMENT

ಹಳದಿ ಮಾರ್ಗ: ಜನ ದಟ್ಟಣೆ ತಡೆಯಲು ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಪತ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2025, 11:22 IST
Last Updated 11 ಆಗಸ್ಟ್ 2025, 11:22 IST
   

ಬೆಂಗಳೂರು: ನಮ್ಮ ಮೆಟ್ರೊ ‘ಹಳದಿ ಮಾರ್ಗ’ದಲ್ಲಿ ಮೊದಲನೇ ದಿನವೇ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಅವರ ಸುರಕ್ಷತೆಗಾಗಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಡಾ. ಜೆ. ರವಿಶಂಕರ್‌ ಅವರಿಗೆ ಪತ್ರ ಬರೆದಿದ್ದಾರೆ.

ನಗರದ ಆರ್‌.ವಿ. ರೋಡ್‌ನಿಂದ ಬೊಮ್ಮಸಂದ್ರದ ನಡುವಿನ ನಮ್ಮ ಮೆಟ್ರೊ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದರು.

ರೇಷ್ಮೆ ಸಂಸ್ಥೆ ಹಾಗೂ ಮಾದಾವರ ನಡುವಿನ ನಮ್ಮ ಮೆಟ್ರೊ ‘ಹಸಿರು ಮಾರ್ಗ’ದಲ್ಲಿ ಪ್ರತಿ 4 ರಿಂದ 8 ನಿಮಿಷಕ್ಕೊಂದು ರೈಲು ಸಂಚರಿಸುತ್ತದೆ. ‘ಹಳದಿ ಮಾರ್ಗ’ದಲ್ಲಿ ಸದ್ಯ ಪ್ರತಿ 25 ನಿಮಿಷಕ್ಕೊಂದು ರೈಲು ಸಂಚಾರ ಮಾಡುತ್ತಿರುವುದರಿಂದ ಎರಡೂ ಮಾರ್ಗಗಳು ಸೇರುವ ಆರ್‌.ವಿ. ರೋಡ್‌ ಮೆಟ್ರೊ ನಿಲ್ದಾಣದಲ್ಲಿ ಜನ ದಟ್ಟಣೆ ಉಂಟಾಗುತ್ತಿದೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಪತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ADVERTISEMENT

ಆರ್‌.ವಿ. ರೋಡ್‌ ಮೆಟ್ರೊ ನಿಲ್ದಾಣದಲ್ಲಿ ಪ್ರಮುಖ ವೇಳೆಯಲ್ಲಿ ಹೆಚ್ಚಿನ ಪ್ರಯಾಣಿಕರು ಸೇರುತ್ತಿದ್ದಾರೆ. ಸದ್ಯ ‘ಹಳದಿ ಮಾರ್ಗ’ದಲ್ಲಿ ಕೇವಲ ಮೂರು ರೈಲುಗಳು ಸಂಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಆ ಸಂಖ್ಯೆ ಹೆಚ್ಚಾಗಲಿದೆ. ಅಲ್ಲಿಯವರೆಗೆ ಜನ ದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ‘ಹಳದಿ ಮಾರ್ಗ’ದ ಮೆಟ್ರೊ ನಿಲ್ದಾಣಗಳಲ್ಲಿ ತಕ್ಷಣವೇ ಪ್ಲಾಟ್‌ಫಾರ್ಮ್‌ ಸ್ಕ್ರೀನ್‌ ಡೋರ್‌ ಅಥವಾ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಪ್ರಯಾಣಿಕರು ಕೂಡ ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ಬಿಎಂಆರ್‌ಸಿಎಲ್‌ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಹಲವು ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಅಳಲು ತೋಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.