ADVERTISEMENT

ಆರೋಗ್ಯಾಧಿಕಾರಿ ಆತ್ಮಹತ್ಯೆ: ಪರಿಹಾರದೊಂದಿಗೆ ಪತ್ನಿಗೆ ಸಬ್ ರಿಜಿಸ್ಟ್ರಾರ್ ಹುದ್ದೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 7:41 IST
Last Updated 21 ಆಗಸ್ಟ್ 2020, 7:41 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ನಿನ್ನೆ (ಆ.20, ಗುರುವಾರ) ಆತ್ಮಹತ್ಯೆ ಮಾಡಿಕೊಂಡಿದ್ದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ (43) ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ನಿನ್ನೆ ದೈವಾಧೀನರಾದ ನಂಜನಗೂಡಿನ ಆರೋಗ್ಯಾಧಿಕಾರಿ ನಾಗೇಂದ್ರ ಅವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಧನ ಹಾಗೂ ಮೃತರ ಪತ್ನಿಗೆ ಸಬ್ ರಿಜಿಸ್ಟ್ರಾರ್ ಉದ್ಯೋಗವನ್ನು ನೀಡಲು ಒಪ್ಪಿಗೆ ಸೂಚಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು. ಪ್ರಕರಣದ ಸಂಪೂರ್ಣ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಕೂಡಲೇ ₹ 50 ಲಕ್ಷ ಪರಿಹಾರವನ್ನು ನೀಡಬೇಕು. ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಬೇಕು ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ವಿಳಂಬ ಮಾಡದೆ ಪಾವತಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

ADVERTISEMENT

ಘಟನೆಯ ನಿಷ್ಪಕ್ಷಪಾತ ಹಾಗೂ ಸಮಗ್ರವಾಗಿ ತನಿಖೆ ನಡೆಸಿ ಏಳು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಮೈಸೂರು ಪ್ರಾದೇಶಿಕ ಆಯುಕ್ತರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇದರೊಂದಿಗೆ ನಾಗೇಂದ್ರ ಅವರ ಆತ್ಮಹತ್ಯೆಯು ತುಂಬಾ ನೋವಿನ ಸಂಗತಿಯಾಗಿದ್ದು, ಆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು ಒತ್ತಡಗಳಿಂದ ದೃತಿಗೆಡುವ ಅಗತ್ಯವಿಲ್ಲ. ನಿಮ್ಮ ಜೊತೆ ಸರ್ಕಾರವಿದ್ದು, ಯಾವುದೇ ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.