ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ಕೇವಲ ಭಾರತೀಯರಿಗೆ ಮಾತ್ರವಲ್ಲ ವಿಶ್ವಕ್ಕೇ ಆದರ್ಶ ಮತ್ತು ಪ್ರೇರಣದಾಯವಾಗಿದೆ ಎಂದು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮೋದಿ ಅವರ 75 ನೇ ಜನ್ಮದಿನದ ಅಂಗವಾಗಿ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ 75 ಪೌರ ಕಾರ್ಮಿಕರಿಗೆ ಸನ್ಮಾನಿಸಿ ಮಾತನಾಡಿದ ಅವರು, ಮೋದಿ ಅವರ ಜನ್ಮದಿನವನ್ನು ಸೇವಾ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ. ಇದು ಮೋದಿ ವ್ಯಕ್ತಿತ್ವದ ಪ್ರತಿಬಿಂಬ ಎಂದು ಅವರು ಹೇಳಿದರು.
ತಮ್ಮನ್ನು ಪ್ರಧಾನ ಸೇವಕ ಎಂದು ಕರೆದುಕೊಳ್ಳುವ ಮೋದಿಯವರು ಅಧಿಕಾರ, ಸ್ಥಾನಮಾನ ಎಂದು ಪರಿಗಣಿಸದೇ, ಸೇವೆಯೇ ಸಾಧನ ಎಂದು ತೋರಿಸಿಕೊಟ್ಟಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾತನಾಡಿ, ‘ಮೋದಿಯವರ ನೇತೃತ್ವದಲ್ಲಿ ಭಾರತ ಕೇವಲ 10–12 ವರ್ಷಗಳಲ್ಲಿ ಜಗತ್ತಿನ ಅಗ್ರಮಾನ್ಯ ರಾಷ್ಟ್ರವಾಗಿ ಪರಿವರ್ತನೆಗೊಂಡಿದೆ. ಜಗತ್ತಿನಲ್ಲಿ ಪ್ರತಿಯೊಂದಕ್ಕೂ ಭಾರತವನ್ನು ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೋದಿಯವರ ಸಂದೇಶಗಳನ್ನು ನಾವೆಲ್ಲರೂ ಮನೆ ಮನೆಗೆ ತಲುಪಿಸಬೇಕು. ದೇಶ ನಿರ್ಮಾಣದಲ್ಲಿ ನಾವೆಲ್ಲರೂ ಒಟ್ಟಿಗೆ ಇರಬೇಕು’ ಎಂದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ
ಎಸ್.ಹರೀಶ್ ಮತ್ತು ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.