ADVERTISEMENT

ಅವರು ತಪ್ಪು ಮಾಹಿತಿ ಕೊಟ್ಟಿಲ್ಲ.. ಲಕ್ಷ್ಮೀ ಹೆಬ್ಬಾಳಕರ ಬೆನ್ನಿಗೆ ನಿಂತ ಡಿಸಿಎಂ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 10:45 IST
Last Updated 18 ಡಿಸೆಂಬರ್ 2025, 10:45 IST
<div class="paragraphs"><p>ಡಿಸಿಎಂ ಡಿಕೆಶಿ,&nbsp;ಲಕ್ಷ್ಮೀ ಹೆಬ್ಬಾಳಕರ</p></div>

ಡಿಸಿಎಂ ಡಿಕೆಶಿ, ಲಕ್ಷ್ಮೀ ಹೆಬ್ಬಾಳಕರ

   

ಬೆಳಗಾವಿ: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ  ಹೆಬ್ಬಾಳಕರ ಅವರು ಗೃಹಲಕ್ಷ್ಮಿ ವಿಚಾರವಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿಲ್ಲ. 24 ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನು ರಾಜ್ಯದ ಮಹಿಳೆಯರಿಗೆ ನೀಡಿದ್ದೇವೆ. ಸದನದಲ್ಲಿ ‘ನ್ಯಾಷನಲ್‌ ಹೆರಾಲ್ಡ್‌’ ಪ್ರಕರಣವನ್ನು ನಾವು ಚರ್ಚೆಗೆ ತೆಗೆದುಕೊಳ್ಳಬಾರದು ಎಂಬ ಉದ್ದೇಶದಿಂದ ಪ್ರತಿಪಕ್ಷವರು ಈ ವಿಚಾರ ಎತ್ತಿಕೊಂಡಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ‍ಪ್ರತಿಕ್ರಿಯಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಚಿವೆ ಯಾವ ತಪ್ಪು ಮಾಹಿತಿ ನೀಡಿದ್ದಾರೆ? ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆಯಾಗಿದೆ. ಅದನ್ನು ಮಹಿಳೆಯರಿಗೆ ನೀಡಲಾಗುತ್ತದೆ. ಇದರಲ್ಲಿ ಯಾವುದೇ ತಪ್ಪು ಮಾಹಿತಿಯಿಲ್ಲ. ‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿರುವ ವಿಚಾರ ಸದನದಲ್ಲಿ ಚರ್ಚೆಗೆ ಬರಬಾರದು ಎಂಬ ಉದ್ದೇಶದಿಂದ ಸದನದ ದಾರಿ ತ‍ಪ್ಪಿಸುವ ನಾಟಕ ನಡೆಸಿದ್ದಾರೆ’ ಎಂದರು.

ADVERTISEMENT

‘ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಹಾಕಿದ ಎಫ್‌ಐಆರ್‌ ಇನ್ನೂ ಇದೆ. ಅದನ್ನು ವಾಪಸ್‌ ಪಡೆದರೆ ಬಿಜೆಪಿಗೇ ಒಳ್ಳೆಯದು. ಅದನ್ನೇ ನೆಪ ಮಾಡಿಕೊಂಡು ಕಾಂಗ್ರೆಸ್‌ ನಾಯಕರಿಗೆ ಕಿರುಕುಳ ಕೊಡುತ್ತಿದ್ದಾರೆ’ ಎಂದೂ ಹೇಳಿದರು.

‘ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಏಕೆ ಹಣ ನೀಡಿಲ್ಲ? ನರೇಗಾ, ಜಲಜೀವನ ಮಿಷನ್ ಹಣವನ್ನೂ ನೀಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನಗಳು, ಜಿಎಸ್‌ಟಿ ಪರಿಹಾರ ಸಿಕ್ಕಿಲ್ಲ. ಈಗ ಇವರು ಗೃಹಲಕ್ಷ್ಮಿ ಹಣದ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದೂ ಕಿಡಿ ಕಾರಿದರು.

‘ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.