ADVERTISEMENT

ಗ್ರಾ.ಪಂ. ಸದಸ್ಯರಿಗೆ ಬೆದರಿಕೆ; ಎಚ್‌.ಡಿ. ಕುಮಾರಸ್ವಾಮಿ ಆರೋಪ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 19:26 IST
Last Updated 5 ಜನವರಿ 2021, 19:26 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್‌ ಸದಸ್ಯರನ್ನು ಮೀಸಲಾತಿಯ ಆಮಿಷ ಮತ್ತು ಬೆದರಿಕೆ ಒಡ್ಡುವ ಮೂಲಕ ತಮ್ಮತ್ತ ಸೆಳೆಯಲು ರಾಷ್ಟ್ರೀಯ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಮಂಗಳವಾರ ಟ್ವೀಟ್‌ ಮಾಡಿರುವ ಅವರು, ‘ಜೆಡಿಎಸ್‌ ಬೆಂಬಲಿತ ಸದಸ್ಯರನ್ನು ಸೆಳೆಯುವ ಪ್ರಯತ್ನಗಳು ಅಲ್ಲಲ್ಲಿ ನಡೆಯುತ್ತಿವೆ. ಅದಕ್ಕೆ ನಮ್ಮವರೂ ತಿರುಗೇಟು ನೀಡುತ್ತಿದ್ದಾರೆ. ಅತಿಹೆಚ್ಚು ಸ್ಥಾನ ಗಳಿಸಿದೆವು ಎಂದು ಹೇಳಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಯಾಕೆ ಇಂತಹ ಗತಿ ಬಂತು? ತಿಳಿಯದು’ ಎಂದು ಟೀಕಿಸಿದ್ದಾರೆ.

ರಾಷ್ಟ್ರೀಯ ಪಕ್ಷಗಳು ಜೆಡಿಎಸ್‌ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಕಾಲು ಹಿಡಿಯುತ್ತಿವೆ. ಅವರ ಮನೆ ಬಾಗಿಲಿಗೆ ಅಲೆಯುತ್ತಿವೆ. ಕನ್ನಡಿಗರು ಜೆಡಿಎಸ್‌ ಪಕ್ಷಕ್ಕೆ ಎಷ್ಟು ಬಲ ತುಂಬಿದ್ದಾರೆ ಎಂಬ ವಿಚಾರ ಗೊತ್ತಾಗುತ್ತದೆ. ರಾಷ್ಟ್ರೀಯ ಪಕ್ಷಗಳು ಜೆಡಿಎಸ್‌ ಮುಖಂಡರ ಕಾಲು ಹಿಡಿಯುವುದನ್ನು ನಿಲ್ಲಿಸಿ ಮರ್ಯಾದೆ ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ADVERTISEMENT

ಕ್ರಮಕ್ಕೆ ಆಗ್ರಹ: ಬೆಳಗಾವಿ ಮಹಾನಗರ ಪಾಲಿಕೆ ಎದುರು ಹಾರಿಸಿರುವ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬೆದರಿಕೆ ಹಾಕಿದೆ. ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ತಕ್ಷಣ ಕ್ರಮ ಜರುಗಿಸಬೇಕು ಎಂದು ಕುಮಾರಸ್ವಾಮಿ ಮತ್ತೊಂದು ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

‘ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ. ಬೆದರಿಕೆ ಹಾಕುವುದು ಅಕ್ಷಮ್ಯ. ಕನ್ನಡ ಧ್ವಜ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕಿಂತ ಮಿಗಿಲು. ‘ಕನ್ನಡಿಗರಿಗೆ ಸರ್ಕಾರ ಹೆದರಬಾರದು’ ಎಂದು ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಗಂಭೀರವಾಗಿ ತೆಗೆದುಕೊಂಡು ಎಂಇಇಎಸ್‌ ವಿರುದ್ಧ ಕ್ರಮ ಕೈಗೊಳ್ಳದೆ ಸುಮ್ಮನಿದೆಯೆ’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.