ಬೆಂಗಳೂರು: ದೇಶದ ಭದ್ರತಾ ವಿಷಯದಲ್ಲಿ ಬಿಜೆಪಿ ನಾಯಕರಲ್ಲೇ ಏಕತೆ ಇಲ್ಲ, ಸುಮ್ಮನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿದ್ದಾರೆ. ವಿರೋಧ ಪಕ್ಷಗಳ ನಾಯಕರು ಸಿದ್ದರಾಮಯ್ಯ ವಿರುದ್ಧದ ಹೇಳಿಕೆಗಳನ್ನು ಹಿಂದಕ್ಕೆ ಪಡೆದು ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ದೇಶದ ಭದ್ರತಾ ವಿಷಯದಲ್ಲಿ ಯಾವಾಗಲೂ ಹೆಚ್ಚು ಕಾಳಜಿ ಹೊಂದಿದ್ದಾರೆ. ಪಾಕಿಸ್ತಾನದ ಜತೆಗಿನ ಯುದ್ಧಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದರು.
ಕಾಶ್ಮೀರದಲ್ಲಿ ಭದ್ರತಾ ವೈಫಲ್ಯ ಆಗಿರುವುದನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪಹಲ್ಗಾಮ್ ಹತ್ಯಾಕಾಂಡದಲ್ಲಿ ಭದ್ರತಾ ವೈಫಲ್ಯ ಉಂಟಾಗಿರುವುದನ್ನು ಗಮನಿಸಿದ ಮುಖ್ಯಮಂತ್ರಿಯವರು ಕೇಂದ್ರ ಸರ್ಕಾರ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ. ಭಯೋತ್ಪಾದನೆ ನಿಯಂತ್ರಣಕ್ಕೆ ಪಾಕಿಸ್ತಾನದೊಂದಿಗೆ ಯುದ್ಧ ಮಾಡುವುದು ಅನಿವಾರ್ಯವಾದರೆ ಕೇಂದ್ರ ಸರ್ಕಾರ ಯುದ್ಧಕ್ಕೂ ಸಿದ್ಧವಿರಬೇಕು ಎಂಬುದು ಮುಖ್ಯಮಂತ್ರಿಯವರ ಹೇಳಿಕೆಯ ಉದ್ದೇಶ ಎಂದು ರಾಯರಡ್ಡಿ ಹೇಳಿದರು.
ಕೇಂದ್ರ ಸರ್ಕಾರ ಕೂಡಲೇ ಸಂಸತ್ತಿನ ವಿಶೇಷ ಅಧಿವೇಶನ ಕರೆದು ದೇಶದ ಭದ್ರತಾ ವಿಷಯಗಳ ಬಗ್ಗೆ ಮತ್ತು ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಕುರಿತು ಚರ್ಚಿಸಬೇಕು. ಪ್ರಧಾನಿ ಮೋದಿಯವರು ಕಾಶ್ಮೀರಕ್ಕೆ ಭೇಟಿ ನೀಡಿ ಸಂಪೂರ್ಣ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ರಾಷ್ಟ್ರ ಎಂಬುದಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.