ADVERTISEMENT

ಬೆಂಗಳೂರಿನ ನೀರಿನ ಸಮಸ್ಯೆಗೆ ಪ್ರತ್ಯೇಕ ಯೋಜನೆ ಅಗತ್ಯ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 11:12 IST
Last Updated 27 ಜೂನ್ 2019, 11:12 IST
   

ಶಿವಮೊಗ್ಗ: ‘ಶರಾವತಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆ ಅವೈಜ್ಞಾನಿಕ. ಬೃಹತ್‌ ನಗರದ ನೀರಿನ ಸಮಸ್ಯೆ ಶಾಶ್ವತವಾಗಿ ನಿವಾರಿಸಲು ಪ್ರತ್ಯೇಕ ಯೋಜನೆ ರೂಪಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದರು.

ಉಪ ವಿಭಾಗಾಧಿಕಾರಿ ಕಚೇರಿ ಸಮುಚ್ಚಯದಲ್ಲಿ ಗುರುವಾರ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರ ಜನಸಂಪರ್ಕ ಕಚೇರಿ ಉದ್ಘಾಟಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಶರಾವತಿ ನದಿಯ ನೀರು ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ, ನೀರಾವರಿಗೆ ಬಳಸಬೇಕು ಎಂದು ಸಲಹೆ ನೀಡಿದರು.

ADVERTISEMENT

‘40 ವರ್ಷಗಳಿಂದ ಈಚೆಗೆ ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಇದೆ. ರಾಜ್ಯ ಸರ್ಕಾರ ಬರಗಾಲದ ಸನ್ನಿವೇಶ ಎದುರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಬರ ನಿರ್ವಹಣೆ ಮಾಡುವ ಬದಲು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಅವರ ಸಂಪುಟದ ಸಚಿವರೂ ಗಮನಹರಿಸುತ್ತಿಲ್ಲ’ ಎಂದು ದೂರಿದರು.

‘ಮೈತ್ರಿಯಲ್ಲಿ ಹೊಂದಾಣಿಕೆ ಇಲ್ಲ. ಪರಸ್ಪರ ದೂರುತ್ತ ಕಾಲ ಕಳೆಯುತ್ತಿದ್ದಾರೆ. ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.