ADVERTISEMENT

ರಾಜಕಾಲುವೆಗಳ ಸುಧಾರಣೆಗೆ ಕಾಲಾವಕಾಶ ಬೇಕು: ಬಸವರಾಜ ಬೊಮ್ಮಾಯಿ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 19:54 IST
Last Updated 13 ಸೆಪ್ಟೆಂಬರ್ 2022, 19:54 IST
   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ಒತ್ತುವರಿ ತೆರವು ಮಾಡಿ, ಅಭಿವೃದ್ಧಿಪಡಿಸಲು ಕನಿಷ್ಠ ಒಂದೂವರೆ ವರ್ಷ ಸಮಯ ಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ ಅವರ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಅವರು, ‘ನಗರದಲ್ಲಿನ ರಾಜಕಾಲುವೆಗಳ ಸುಧಾರಣಾ ಕಾಮಗಾರಿಗಳಿಗಾಗಿ ₹ 1,500 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ರಾಜಕಾಲುವೆಗಳನ್ನು ಅತಿಕ್ರಮಣ ಮಾಡಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಿದ ಬಳಿಕವೇ ಕಾಮಗಾರಿಗಳನ್ನು ಆರಂಭಿಸಬೇಕಿದೆ’ ಎಂದರು.

ನಗರದ ವ್ಯಾಪ್ತಿಯಲ್ಲಿ 859.90 ಕಿ.ಮೀ. ಉದ್ದದ 633 ರಾಜಕಾಲುವೆಗಳಿವೆ. ಈ ಪೈಕಿ 490.10 ಕಿ.ಮೀ. ಉದ್ದದ ಕಾಲುವೆಗಳನ್ನು 20 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. 469.80 ಕಿ.ಮೀ. ಉದ್ದ ಕಾಲುವೆಗಳನ್ನು ಅಭಿವೃದ್ಧಿಪಡಿಸಬೇಕಿದೆ. ಹೆಚ್ಚುವರಿಯಾಗಿ ₹ 300 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ADVERTISEMENT

‘ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಮಂಜೂರಾತಿ ನೀಡಿದ್ದ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ನನ್ನ ಅವಧಿಯಲ್ಲಿ ಮಂಜೂರಾತಿ ನೀಡಿದ ಕಾಮಗಾರಿಗಳನ್ನು ಮುಗಿಸಲು ಒಂದೂವರೆ ವರ್ಷ ಬೇಕಾಗುತ್ತದೆ. ರಾಜಕಾಲುವೆಗಳನ್ನು ಸಮಗ್ರವಾಗಿ ಸಮೀಕ್ಷೆ ನಡೆಸಿ, ಒತ್ತುವರಿ ಪ್ರದೇಶದಲ್ಲಿರುವ ಕಟ್ಟಡಗಳನ್ನು ಗುರುತಿಸಿ ತೆರವು ಮಾಡಲು ದೀರ್ಘ ಸಮಯ ಹಿಡಿಯುತ್ತದೆ’ ಎಂದರು.

ಹೆಚ್ಚು ಮಳೆಯಾಗಿರುವುದರಿಂದ ಕೆರೆಗಳು ಭರ್ತಿಯಾಗಿವೆ. ಅಲ್ಲಿನ ನೀರು ರಾಜಕಾಲುವೆಗಳಲ್ಲಿ ಹರಿದು ಮುಂದಕ್ಕೆ ಹೋಗುತ್ತಿಲ್ಲ. ಇದು ಪ್ರವಾಹ ಸ್ಥಿತಿ ನಿರ್ಮಾಣವಾಗಲು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಹೇಳಿದರು.

ಹೆಚ್ಚಿನ ಅನುದಾನಕ್ಕೆ ಆಗ್ರಹ: ಕೃಷ್ಣ ಬೈರೇಗೌಡ ಮಾತನಾಡಿ, ‘ರಾಜಕಾಲುವೆಗಳ ಅಭಿವೃದ್ಧಿಗೆ ನನ್ನ ವಿಧಾನಸಭಾ ಕ್ಷೇತ್ರಕ್ಕೆ ₹ 110 ಕೋಟಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಿದ್ದೆ. ಆದರೆ, ₹ 20 ಕೋಟಿ ಮಾತ್ರ ಒದಗಿಸಲಾಗಿದೆ. ಇದರಿಂದ ಕ್ಷೇತ್ರದ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ಅಭಿವೃದ್ಧಿ ಅಸಾಧ್ಯ. ಹೆಚ್ಚಿನ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಮೂರು ವರ್ಷಗಳ ಅವಧಿಯಲ್ಲಿ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಕ್ಕೆ ₹ 407 ಕೋಟಿ ಅನುದಾನ ನೀಡಲಾಗಿದೆ. ಅಮೃತ್‌ ಯೋಜನೆಯಡಿ ಒದಗಿಸಿರುವ ₹ 100 ಕೋಟಿಯನ್ನೂ ರಾಜಕಾಲುವೆಗಳ ಅಭಿವೃದ್ಧಿಗೂ ಬಳಸಬಹುದು’ ಎಂದರು.

ಬಾಕಿ ಉಳಿದಿರುವ 469.80 ಕಿ.ಮೀ. ಉದ್ದದ ರಾಜಕಾಲುವೆಗಳ ಅಭಿವೃದ್ಧಿಗೆ ಈಗಲೇ ಅನುದಾನ ಒದಗಿಸಿ, ಕಾಮಗಾರಿ ಆರಂಭಿಸಬೇಕು. ಕೆಲಸ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಬೇಕು ಎಂದು ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.