ಬೆಂಗಳೂರು: ‘ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಲ್ಲ. ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ವಿರುದ್ಧ ಕಾನೂನು ಹೋರಾಟ ಮಾಡುವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ವಿವಿಧ ಕೋರ್ಟ್‌ಗಳು ನೀಡಿರುವ ತೀರ್ಪುಗಳ ಪ್ರಕಾರ ತಿದ್ದುಪಡಿ ಮಾಡಿರುವ ನಿದರ್ಶನವಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದೆ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ. ಹೇಳಿಕೆಯನ್ನು ಬಿಜೆಪಿ ನಾಯಕರು ತಿರುಚಿದ್ದಾರೆ. ಜನರ ದಾರಿ ತಪ್ಪಿಸುತ್ತಿದ್ದಾರೆ. 36 ವರ್ಷಗಳಿಂದ ಶಾಸಕನಾಗಿರುವ ನನಗೆ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ. ನಡ್ಡಾ ಅವರಿಗಿಂತಲೂ ನಾನು ಉತ್ತಮ ಸಂವೇದನೆ ಇರುವ ರಾಜಕಾರಣಿ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ’ ಎಂದು ಆರೋಪಿಸಿದರು.
‘ಕಾಂಗ್ರೆಸ್ ಸಹ ರಾಷ್ಟ್ರೀಯ ಪಕ್ಷ, ಸಂವಿಧಾನವನ್ನು ಜಾರಿಗೆ ತಂದ ಕಾಂಗ್ರೆಸ್‌ಗೆ ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ಚೆನ್ನಾಗಿ ಗೊತ್ತಿದೆ. ಕೇಂದ್ರ ಬಜೆಟ್‌ನಲ್ಲಿ ಏನೂ ಇಲ್ಲದ ಕಾರಣಕ್ಕೆ ಬಿಜೆಪಿ ಇಂತಹ ಇಲ್ಲಸಲ್ಲದ ವಿಚಾರ ಪ್ರಸ್ತಾಪ ಮಾಡುತ್ತಿದೆ. ತನ್ನ ಲೋಪಗಳನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ವಿಚಾರ ಮುನ್ನೆಲೆಗೆ ತರುತ್ತಿದೆ. ಇದೊಂದು ರಾಜಕೀಯ ಪಿತೂರಿ’ ಎಂದರು.
‘ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧಾರದ ಮೇಲೆ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಲಾಗಿದೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳ ನ್ಯಾಯಾಲಯಗಳು ನೀಡಿದ ತೀರ್ಪುಗಳ ಆಧಾರದ ಮೇಲೆ ಕೆಲವು ಬದಲಾವಣೆ ಮಾಡಿ ಅವಕಾಶ ನೀಡಲಾಗಿದೆ’ ಎಂದು ಸಮರ್ಥಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.