ADVERTISEMENT

ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿ: ನಿಡುಮಾಮಿಡಿ ಶ್ರೀ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 7:03 IST
Last Updated 25 ಜುಲೈ 2021, 7:03 IST
ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅವರ ಸಾಂದರ್ಭಿಕ ಚಿತ್ರ
ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅವರ ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಜಾತಿ, ಮತ ಎಲ್ಲವನ್ನೂ ಮೀರಿದ ನಾಯಕ ಬಿ.ಎಸ್. ಯಡಿಯೂರಪ್ಪ. ಅವರು ಕೇವಲ ಲಿಂಗಾಯತ ನಾಯಕರಾಗಲಿಲ್ಲ. ಸರ್ವ ಜನಾಂಗದ ಪ್ರೀತಿ ವಿಶ್ವಾಸ ಗಳಿಸಿದ್ದಾರೆ. ಅವರಿಗೆ ವಯಸ್ಸಾಗಿದೆ ಎಂದು ಕಾರಣ ನೀಡಿ ಅಧಿಕಾರದಿಂದ ಕೆಳಗಿಳಿಸುವುದು ಸರಿಯಲ್ಲ. ಯಡಿಯೂರಪ್ಪನವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು’ ಎಂದು ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದರು.

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ತಮ್ಮ ನಿಲುವು ವ್ಯಕ್ತಪಡಿಸಲು ಸೇರಿದ್ದ ಸ್ವಾಮೀಜಿಗಳ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.

‘ತಮಿಳುನಾಡಿನಲ್ಲಿ 75 ವರ್ಷ ವಯಸ್ಸು ಮೀರಿದ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿ, ಬಿಜೆಪಿಯು ಚುನಾವಣೆ ಎದುರಿಸಿತ್ತು. ಆದರೆ, ವಯಸ್ಸಾಯಿತು ಎಂಬ ಕಾರಣ ನೀಡಿ ಯಡಿಯೂರಪ್ಪನವರನ್ನು ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ. ಪಕ್ಷವು ಒಂದೊಂದು ಕಡೆ ಒಂದೊಂದು ನಿಯಮ ಪಾಲಿಸಬಾರದು. ಬಿಜೆಪಿಯಲ್ಲಿ ಸದ್ಯ, ಯಡಿಯೂರಪ್ಪನವರಿಗೆ ಸಾಟಿಯಾಗಬಲ್ಲ ಮತ್ತೊಬ್ಬ ನಾಯಕ ರಾಜ್ಯದಲ್ಲಿಲ್ಲ’ ಎಂದೂ ಹೇಳಿದರು.

ADVERTISEMENT

‘ಸರ್ಕಾರದ ರಚನೆಯ ಸಂದರ್ಭದಲ್ಲಿ ಯಡಿಯೂರಪ್ಪ ಅಪಕೀರ್ತಿಗೆ ಒಳಗಾಗಿದ್ದರು. ನಂತರ, ಅತ್ಯಂತ ದಕ್ಷತೆಯಿಂದ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ನೆರೆ, ಬರ ಹಾಗೂ ಕೋವಿಡ್‌ನಂತಹ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ. ಬಿಜೆಪಿ ನಾಯಕರು ಮಠಾಧೀಶರ ಮಾತಿಗೆ ಮನ್ನಣೆ ನೀಡಬೇಕು ಮತ್ತು ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.