ನವದೆಹಲಿ: ’ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾದುದು. ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಪ್ರಸ್ತುತ ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಪ್ರಸ್ತುತ ರಾತ್ರಿ 9ರಿಂದ ಬೆಳಿಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯ ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು’ ಎಂದರು.
ಇದಕ್ಕೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಇಲಾಖೆಯಲ್ಲಿ ಕೈಗೊಂಡ ಪ್ರಗತಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.