ADVERTISEMENT

ಅನಂತ ಕುಮಾರ ಹೆಗಡೆ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 18:41 IST
Last Updated 26 ಜೂನ್ 2025, 18:41 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್‌ಪೇಟೆ ಸಮೀಪದ ಹಳೇ ನಿಜಗಲ್‌ ಬಳಿ ನಡೆದಿದ್ದ ಗಲಾಟೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿಯ ಮಾಜಿ ಕೇಂದ್ರ ಸಚಿವ, ‘ಅನಂತ ಕುಮಾರ ಹೆಗಡೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು. ಅನಂತ ಕುಮಾರ ಹೆಗಡೆ ತನಿಖೆಗೆ ಸಹಕರಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

‘ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಅನಂತ ಕುಮಾರ ಹೆಗಡೆ ಮತ್ತಿತರರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಎಚ್‌.ಪವನಚಂದ್ರ ಶೆಟ್ಟಿ, ‘ಆರೋಪಿಗಳು ಮುಗ್ಧರು ಮತ್ತು ಈ ಘಟನೆಯಲ್ಲಿ ಭಾಗಿಯಾಗಿಲ್ಲ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್‌.ಜಗದೀಶ್‌, ‘ಅರ್ಜಿದಾರರು ತನಿಖೆಗೆ ಸಹಕರಿಸಿದರೆ ಬಂಧಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತನಿಖೆಗೆ ಸಹಕರಿಸಿದರೆ ಅವರನ್ನು ಬಂಧಿಸಬಾರದು’ ಎಂದು ಆದೇಶಿಸಿತು. ಪ್ರಾಸಿಕ್ಯೂಷನ್‌ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.