ಪುಷ್ಪ ಕೃಷಿ
ನವದೆಹಲಿ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ವ್ಯಾಪ್ತಿಗೆ ಪುಷ್ಪ ಕೃಷಿ ಹಾಗೂ ಹೈನುಗಾರಿಕೆಯನ್ನು ಸೇರಿಸಿಲ್ಲ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ ಠಾಕೂರ್ ತಿಳಿಸಿದರು.
ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪುಷ್ಪ ಕೃಷಿಗೆ ಯಾವುದೇ ವಿಮೆ ಯೋಜನೆ ಇಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ’ ಎಂದರು.
‘ಫಸಲ್ ಬಿಮಾ ಯೋಜನೆಯನ್ನು 2016–17ರಲ್ಲಿ ಜಾರಿಗೆ ತರಲಾಗಿತ್ತು. ಅಂದಿನಿಂದ ಇಲ್ಲಿಯವರೆಗೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 19.68 ಕೋಟಿ ರೈತರಿಗೆ ₹1.73 ಲಕ್ಷ ಕೋಟಿ ವಿಮೆ ಪಾವತಿ ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
‘ಹೆಚ್ಚಿನ ವಿಮಾ ಕ್ಲೇಮುಗಳನ್ನು ವಿಮಾ ಕಂಪನಿಗಳು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸುತ್ತವೆ. ಆದರೆ, ಕ್ಲೇಮುಗಳ ಪಾವತಿ ವಿಳಂಬ, ರಾಜ್ಯ ಸರ್ಕಾರ ಹಾಗೂ ವಿಮಾ ಕಂಪನಿಗಳ ನಡುವೆ ವಿವಾದ, ನಿಧಿಯ ಪಾಲು ಪಾವತಿಯಲ್ಲಿ ರಾಜ್ಯ ಸರ್ಕಾರದಿಂದ ವಿಳಂಬ, ಸಾಕಷ್ಟು ಸಿಬ್ಬಂದಿಯನ್ನು ವಿಮಾ ಕಂಪನಿ ನಿಯೋಜನೆ ಮಾಡದಿರುವುದು ಸೇರಿದಂತೆ ಹಲವು ಕಾರಣಗಳಿಂದ ಸಮಸ್ಯೆ ಸೃಷ್ಟಿಯಾಗಿತ್ತು. ಈಗ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.