ಬಸವರಾಜು ಶಿವಗಂಗಾ
ದಾವಣಗೆರೆ: ವಿಧಾನಸಭಾ ಚುನಾವಣೆಯ ಬಳಿಕ ನಡೆದ ಕೆಲ ಬೆಳವಣಿಗೆಗಳಿಂದ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಒಲಿದಿದೆ. ಕುರ್ಚಿ ಖಾಲಿಯಾದ ತಕ್ಷಣ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ತಿಳಿಸಿದರು.
‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿ ಆಗಬೇಕಿತ್ತು. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ದೊಡ್ಡದಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಉಪಚುನಾವಣೆಯಲ್ಲಿ ಕೂಡ ಶಕ್ತಿ ಪ್ರದರ್ಶಿಸಿದ್ದಾರೆ. ಹೈಕಮಾಂಡ್ ಇದನ್ನು ಗಮನಿಸಿ ತೀರ್ಮಾನ ಕೈಗೊಳ್ಳುತ್ತದೆ. ಅವರಿಗೆ ಪ್ರತಿಫಲ ಸಿಗುವ ವಿಶ್ವಾಸವಿದೆ’ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಜೆಡಿಎಸ್‌ನ 11 ಶಾಸಕರು ಕಾಂಗ್ರೆಸ್‌ಗೆ ಬರಲು ಸಜ್ಜಾಗಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಮಾತಿಗಿಂತ ಹೆಚ್ಚು ಕೆಲಸ ಮಾಡುವುದು ಅವರ ಕಾರ್ಯವೈಖರಿ. ಕಷ್ಟಪಟ್ಟವರಿಗೆ ಒಳ್ಳೆಯ ದಿನಗಳು ಬರುತ್ತವೆ’ ಎಂದರು.
‘ಪಕ್ಷದ ಕಾರ್ಯಕರ್ತರು ಹಾಗೂ ಶಾಸಕರ ಬಗ್ಗೆ ಡಿ.ಕೆ.ಶಿವಕುಮಾರ್ ಆಡಿರುವ ಮಾತುಗಳಲ್ಲಿ ತಪ್ಪಿಲ್ಲ. ಕೆಲವರು ಕೆಟ್ಟ ದೃಷ್ಟಿಯಿಂದ ನೋಡಿ ತಪ್ಪಾಗಿ ಅರ್ಥೈಸುತ್ತಿದ್ದಾರೆ. ಇದಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅವರ ಪರವಾಗಿ ನಾವಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.