ಬಿ.ಆರ್.ಪಾಟೀಲ ಮತ್ತು ಟಿ.ಬಿ.ಜಯಚಂದ್ರ ಅವರು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಬೆಂಗಳೂರು: ಕೇಂದ್ರ ಸರ್ಕಾರವು ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡುತ್ತಿದ್ದರೂ, ಜಲಸಂಪನ್ಮೂಲ, ಸಣ್ಣನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳಿಗೆ ಘೋಷಿತ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
2024–25 ಮತ್ತು 2025–26 ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಾಹಿತಿ ಕುರಿತು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮತ್ತು ರಾಜ್ಯ ನೀತಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು.
ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ ಗುಪ್ತ ಮಾತನಾಡಿ, ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಘೋಷಿತ ಅನುದಾನ ಬಿಡುಗಡೆ ಆಗುತ್ತಿಲ್ಲ. ಹೀಗಾಗಿ, ರಾಜ್ಯದ ನೀರಾವರಿ ಯೋಜನೆಗಳು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿವೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದರೂ ಯೋಜನೆಗೆ ಅಗತ್ಯವಿರುವ ₹5,600 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ಈವರೆಗೆ ಬಿಡುಗಡೆ ಮಾಡಿಲ್ಲ ಎಂದು ಅವರು ಹೇಳಿದರು.
ಕೃಷ್ಣಾ ಮತ್ತು ತುಂಗಭದ್ರಾ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನೆರೆಯ ತೆಲಂಗಾಣ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಆದರೆ, ಆಂಧ್ರಪ್ರದೇಶ ಸರ್ಕಾರ ನಕರಾತ್ಮಕ ಧೋರಣೆ ತಾಳಿದೆ. ಹೀಗಾಗಿ ನೀರಾವರಿ ಯೋಜನೆ ವಿಳಂಬವಾಗಿದೆ. ಕೇಂದ್ರ ಜಲಸಂಪನ್ಮೂಲ ಸಚಿವರು ಸಭೆ ಕರೆದರೂ ಆಂಧ್ರಪ್ರದೇಶದಿಂದ ಯಾರೂ ಭಾಗವಹಿಸುತ್ತಿಲ್ಲ. ತಮಿಳುನಾಡು ಕೂಡಾ ಕರ್ನಾಟಕದ ಯೋಜನೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಿ, ಆಂಧ್ರ ಮತ್ತು ತಮಿಳುನಾಡು ಸರ್ಕಾರಗಳು ರಾಜ್ಯದ ಯೋಜನೆಗಳಿಗೆ ಒಪ್ಪಿಗೆ ಸೂಚಿಸುವಂತೆ ಮಾಡಬೇಕು ಎಂದು ತಿಳಿಸಿದರು.
ರಾಜ್ಯದ ರೈಲ್ವೆ ಯೋಜನೆಗಳಿಗೆ ಹಣಕಾಸಿನ ಕೊರತೆ ಆಗುತ್ತಿಲ್ಲ. ಕೇಂದ್ರ ಭೂಸಾರಿಗೆ ಮತ್ತು ರಸ್ತೆ ಅಭಿವೃದ್ಧಿ ಇಲಾಖೆಯೂ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸಲು ಅಗತ್ಯವಿರುವಷ್ಟು ಹಣ ಬಿಡುಗಡೆ ಮಾಡುತ್ತಿದೆ ಎಂದರು.
ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಬಿ.ಕೆ. ಪವಿತ್ರ ಮಾತನಾಡಿ, ಪಿಎಂಕೆಎಸ್‌ವೈ ಯೋಜನೆಯಡಿ 1036 ಯೋಜನೆಗಳಿಗೆ ₹2434 ಕೋಟಿಯನ್ನು ಕೇಂದ್ರ ನೀಡಬೇಕು. ರಾಜ್ಯದ ಪ್ರಸ್ತಾವಿತ 172 ಹೊಸ ಯೋಜನೆಗಳಿಗೆ ₹475 ಕೋಟಿ ನೀಡಬೇಕಾಗಿದೆ ಎಂದರು.
ರಾಜ್ಯದಲ್ಲಿ 28 ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಪ್ರಗತಿಯಲ್ಲಿವೆ. 13 ಕೈಗಾರಿಕಾ ವಲಯಗಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದಕ್ಕೆ ಸಕಾಲದಲ್ಲಿ ಕೇಂದ್ರದಿಂದ ಹಣ ಬಿಡುಗಡೆ ಆಗುತ್ತಿದೆ. ಕೆಲವು ಭಾಗಗಳಲ್ಲಿ ಭೂಸ್ವಾಧೀನ ಸಮಸ್ಯೆಯಾಗಿದ್ದು, ಇದರಿಂದ ಕಾಮಗಾರಿ ತಡವಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಶಾಂತಕುಮಾರ್ ಮಾಹಿತಿ ನೀಡಿದರು.
ರಾಜ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಐದು ಫುಡ್ ಪಾರ್ಕ್‌ಗಳಿಗೆ ಅಗತ್ಯ ಹಣಕಾಸಿನ ನೆರವು ನೀಡಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು-ಟಿ.ಬಿ.ಜಯಚಂದ್ರ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ
ರಾಜ್ಯದ ಗಡಿ ಪ್ರದೇಶಗಳಿಗೆ ಹೊಂದಿಕೊಂಡಿರುವ ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಅಭಿವೃದ್ಧಿಪಡಿಸಬೇಕು-ಬಿ.ಆರ್.ಪಾಟೀಲ, ಉಪಾಧ್ಯಕ್ಷ ರಾಜ್ಯ ನೀತಿ ಹಾಗೂ ಯೋಜನಾ ಆಯೋಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.