ADVERTISEMENT

ವೈದ್ಯಕೀಯ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 16:30 IST
Last Updated 9 ನವೆಂಬರ್ 2021, 16:30 IST
ಡಾ. ಕೆ. ಸುಧಾಕರ್‌
ಡಾ. ಕೆ. ಸುಧಾಕರ್‌   

ಬೆಂಗಳೂರು: ‘ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2021–22) ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಮಾಡಲು ಸಾಧ್ಯ ಇಲ್ಲವೆಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಒಕ್ಕೂಟಕ್ಕೆ ಈಗಾಗಲೇ ಸ್ಪಷ್ಟಪಡಿಸಿದ್ದೇನೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಖಾಸಗಿ ವೈದ್ಯಕೀಯ ಕಾಲೇಜುಗಳ ಒಕ್ಕೂಟ ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದೆ. ಆದರೆ, ಒಕ್ಕೂಟದ ಪ್ರತಿನಿಧಿಗಳಿಗೆ ಸರ್ಕಾರದ ನಿಲುವು ತಿಳಿಸಿದ್ದೇನೆ’ ಎಂದರು.

‘ಕೋವಿಡ್‌ನಿಂದಾಗಿ ಜನಸಾಮಾನ್ಯರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಹೀಗಾಗಿ, ಈ ವರ್ಷ ಶುಲ್ಕ ಹೆಚ್ಚಿಸಲು ಸಾಧ್ಯ ಇಲ್ಲ. ಆದರೆ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಇದಕ್ಕೆ ಒಪ್ಪುತ್ತಿಲ್ಲ. ಈ ಬಗ್ಗೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು‘ ಎಂದರು.

ADVERTISEMENT

ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳ ಮಧ್ಯೆ ಸೋಮವಾರ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಶೇ 30ರಷ್ಟು ಶುಲ್ಕ ಹೆಚ್ಚಳಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಬೇಡಿಕೆ ಇಟ್ಟಿವೆ. ಅದಕ್ಕೆ ಸರ್ಕಾರ ನಿರಾಕರಿಸಿರುವುದರಿಂದ, ಕನಿಷ್ಠ ಶೇ 20ರಷ್ಟಾದರೂ ಶುಲ್ಕ ಹೆಚ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.