ADVERTISEMENT

ಒಳ ಒಪ್ಪಂದ ನಡೆಯಲ್ಲ: ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2019, 20:12 IST
Last Updated 2 ಡಿಸೆಂಬರ್ 2019, 20:12 IST

ರಾಜರಾಜೇಶ್ವರಿನಗರ: ‘ಜಾತಿ ಹೆಸರು ಹೇಳಿಕೊಂಡು ಐದು ವರ್ಷಗಳಿಗೊಮ್ಮೆ ಬರುವ ಜನರಿಗೆ ತಕ್ಕ ಬುದ್ಧಿ ಕಲಿಸಿ. ಕ್ಷೇತ್ರದ ಅಭಿವೃದ್ಧಿಗೆ ನಾನು ಜೀವವನ್ನೇ ತ್ಯಾಗ ಮಾಡಲು ಸಿದ್ಧನಿದ್ದೇನೆ’ ಎಂದು ಯಶವಂತಪುರ ಕ್ಷೇತ್ರದ ಅಭ್ಯರ್ಥಿ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಮುದ್ದಯ್ಯನಪಾಳ್ಯ, ಹೇರೋಹಳ್ಳಿ, ಬಿ.ಇ.ಎಲ್ ಬಡಾವಣೆಯಲ್ಲಿ ಸೋಮವಾರ ಮತಯಾಚನೆ ಮಾಡಿ ಮಾತನಾಡಿ, ‘ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡು ನನ್ನನ್ನು ಸೋಲಿಸಲು ಸಾಧ್ಯವಿಲ್ಲ’ ಎಂದರು.

‘ಕಾಂಗ್ರೆಸ್‌ ಅಥವಾ ಜೆಡಿಎಸ್‌ನವರು ಯಾರೂ ಮುಖ್ಯಮಂತ್ರಿ ಆಗುವುದಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಆಗಲೇ ಬಿಜೆಪಿಯನ್ನು ಸೋಲಿಸಲು ಸಾಧ್ಯವಾಗಲಿಲ್ಲ. ಈಗ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ ಅಭ್ಯರ್ಥಿಯನ್ನು ಹರಕೆಯ ಕುರಿ ಮಾಡಿದ್ದಾರೆ’ ಎಂದು ಹೇಳಿದರು.

ADVERTISEMENT

ಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಸರ್ಕಾರ ಮತ್ತಷ್ಟು ಸುಭದ್ರವಾಗಲಿದೆ. ಅವಕಾಶ ಇದ್ದಾಗಲೇ ಮೈತ್ರಿ ಸರ್ಕಾರದಲ್ಲಿ ಶಾಸಕರನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ. ಮೈತ್ರಿ ಎಂಬುದು ಶುದ್ಧ ಸುಳ್ಳು ಎಂದು ಸೋಮಶೇಖರ್ ಲೇವಡಿ ಮಾಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇರೋಹಳ್ಳಿ ಮತ್ತು ದೊಡ್ಡ ಬಿದರಕಲ್ಲು ವ್ಯಾಪ್ತಿ ಅಭಿವೃದ್ಧಿಗೆ ಈಗಾಗಲೇ ₹260 ಕೋಟಿ ಬಿಡುಗಡೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಅದಕ್ಕಾಗಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದೇ ಕ್ಷೇತ್ರದ ವ್ಯಾಪ್ತಯಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌, ಸಂಸದೆ ಶೋಭಾ ಕರಂದ್ಲಾಜೆ ಅವರು ಸೋಮಶೇಖರ್‌ ಪರ ಪ್ರಚಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.