ADVERTISEMENT

ಕೆಣಕಿದರೆ ಸುಮ್ಮನಿರಲ್ಲ: ಮಹಾಜನ್‌ ವರದಿಯೇ ಅಂತಿಮ– ಒಕ್ಕೊರಲ ಧ್ವನಿ

ಗಡಿ ತಗಾದೆ ತೆಗೆದ ಠಾಕ್ರೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 19:36 IST
Last Updated 18 ಜನವರಿ 2021, 19:36 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಅಲ್ಲಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜಕೀಯ, ಸಾಮಾಜಿಕ, ಸಾಹಿತ್ಯಕ ಹೀಗೆ ಎಲ್ಲ ವಲಯಗಳಿಂದ ತೀವ್ರ ಪ್ರತಿರೋಧ, ಪ್ರತಿಭಟನೆ, ಖಂಡನೆ ವ್ಯಕ್ತವಾಗಿದೆ.

‘ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾಜನ್‌ ವರದಿಯೇ ಅಂತಿಮ. ಕರ್ನಾಟಕ ಸರ್ಕಾರ ಈ ವರದಿಯಿಂದ ಹಿಂದೆ ಸರಿಯುವುದಿಲ್ಲ. ನೆಲ-ಜಲ-ಭಾಷೆಯ ರಕ್ಷಣೆ ವಿಷಯದಲ್ಲಿ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ’ ಎಂದು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ಒಕ್ಕೊರಲಿನಿಂದ ಗುಡುಗಿದ್ದಾರೆ.‌

ADVERTISEMENT

ಮತ್ತೊಂದೆಡೆ, ಠಾಕ್ರೆ ಹೇಳಿಕೆ ಖಂಡಿಸಿ ಬೆಳಗಾವಿಯೂ ಸೇರಿದಂತೆ ರಾಜ್ಯದ ವಿವಿಧೆಡೆ ಬೀದಿಗಿಳಿದಿರುವ ಕನ್ನಡಪರ ಹೋರಾಟಗಾರರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಗಡಿ ಭಾಗದಲ್ಲಿ ವಿವಾದ ಸೃಷ್ಟಿಸುತ್ತಿರುವ ಶಿವಸೇನೆ, ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಸಂಘಟನೆಗಳನ್ನು ನಿಷೇಧಿಸಬೇಕು. ಕರ್ನಾಟಕ ಸರ್ಕಾರ ಇತ್ತೀಚೆಗೆ ಸ್ಥಾಪಿಸಿರುವ ಮರಾಠಾ ಅಭಿವೃದ್ಧಿ ನಿಗಮವನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಸಾಹಿತಿಗಳೂ ಧ್ವನಿ ಎತ್ತಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲೂ ಭಾರೀ ಟೀಕೆ ವ್ಯಕ್ತವಾಗಿದೆ.

‘ಹೆಚ್ಚು ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಹಾಗೂ ಮರಾಠ ಸಂಸ್ಕೃತಿ ಹೊಂದಿರುವ ಪ್ರದೇಶಗಳನ್ನು ಮಹಾರಾಷ್ಟಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ವಿಚಾರಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದೇ ಆಗಿದೆ’ ಎಂದು ಉದ್ಧವ್‌‌ ಠಾಕ್ರೆ ಕಚೇರಿ ಭಾನುವಾರ ಟ್ವೀಟ್‌ ಮಾಡಿತ್ತು.

ಈ ಟ್ವೀಟ್‌ಗೆ ಸೋಮವಾರ ತಿರುಗೇಟು ನೀಡಿರುವ ಆಡಳಿತಾರೂಢ ಬಿಜೆಪಿ, ನೇರವಾಗಿ ವಾಗ್ದಾಳಿ ನಡೆಸಿದೆ.

‘ಕರ್ನಾಟಕದ ಒಂದು ಅಡಿ ಭೂಮಿಯನ್ನೂ ಪಡೆಯುವುದು ಉದ್ಧವ್‌ ಠಾಕ್ರೆಗೆ ಸಾಧ್ಯವಿಲ್ಲ. ಅದಕ್ಕೆ ನಾವು ಅವಕಾಶ ನೀಡುವುದೂ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಬ್ಬರಿಸಿದ್ದಾರೆ.

‘ಬೆಳಗಾವಿ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ’ ಎಂದು ಉದ್ಧವ್‌ ಠಾಕ್ರೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಎಚ್ಚರಿಕೆ ನೀಡಿದ್ದಾರೆ.

‘ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದದಿಂದ ಸಹಬಾಳ್ವೆ ನಡೆಸುತ್ತಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ದೇಶದ್ರೋಹಿ ಕೃತ್ಯ ಎಂದು ಹೇಳಬೇಕಾಗುತ್ತದೆ‘ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

‘ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ ಕೆರಳಿಸುವ ಯತ್ನ ಮಾಡುವುದನ್ನು ನಿಲ್ಲಿಸಬೇಕು’ ಎಂದು ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

‘ಮಹಾಜನ್‌ ವರದಿಯನ್ನು ಒಪ್ಪಿದ್ದೇವೆ. ಅದರಂತೆ ನಡೆದುಕೊಳ್ಳುತ್ತೇವೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

‘ದೇಶದ ಏಕತೆ-ಸಮಗ್ರತೆಗೆ ಧಕ್ಕೆ ತರುವಂತಹ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಕಾಂಗ್ರೆಸ್‌ ತಕ್ಷಣ ವಾಪಸ್‌ ಪಡೆಯಬೇಕು. ಗಡಿ ವಿಷಯವನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಶಿವಸೇನೆಯಂಥ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ಮಾರಕ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.