ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯೇ ಇಲ್ಲ– ಸಚಿವ ಆರಗ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 16:33 IST
Last Updated 4 ಜುಲೈ 2022, 16:33 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎಡಿಜಿಪಿ ಅಮ್ರಿತ್‌ ಪೌಲ್‌ ಅವರನ್ನು ಬಂಧಿಸಿರುವುದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯೇ ಇಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಪೌಲ್‌, ಇಡೀ ಕಟ್ಟಡದ ವಿದ್ಯುತ್‌ ದೀಪ ಆರಿಸಿ, ಒಎಂಆರ್‌ ಪ್ರತಿ ತಿದ್ದಿಸಿರುವುದು ಪತ್ತೆಯಾಗಿದೆ. 18 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಲಾಗಿದೆ. ನಮ್ಮ ಸರ್ಕಾರ ಯಾವುದೇ ಆರೋಪಿಯನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ ಎಂಬುದಕ್ಕೆ ಇದು ಸಾಕ್ಷಿ’ ಎಂದರು.

‘ನಾನು ವಿಧಾನಮಂಡಲದಲ್ಲಿ ಈ ಕುರಿತು ಉತ್ತರ ನೀಡಿದಾಗ, ಪ್ರಕರಣದ ಕುರಿತು ತನಿಖೆ ನಡೆದಿರಲಿಲ್ಲ. ನಾನು ಯಾವುದೇ ಸುಳ್ಳು ಹೇಳಿಲ್ಲ. ಪ್ರಕರಣದ ಮಾಹಿತಿ ದೊರಕುತ್ತಿದ್ದಂತೆ ತನಿಖೆಗೆ ಆದೇಶಿಸಿದ್ದೆವು. ಅಕ್ರಮದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸಲಾಗುತ್ತಿದೆ. ದುಡ್ಡು ಕೊಟ್ಟು ನೌಕರಿ ಪಡೆಯಲು ಯತ್ನಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಸಂದೇಶ ರವಾನಿಸಿದ್ದೇವೆ’ ಎಂದರು.

ADVERTISEMENT

‘ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಯಾರನ್ನು ಬಂಧಿಸಿದ್ದರು’ ಎಂದು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.