ADVERTISEMENT

ನೆರೆ ಸಂತ್ರಸ್ತರಿಗೆ ದೊರೆಯದ ಸೂರು: ಮುಖ್ಯಮಂತ್ರಿ ಯಡಿಯೂರಪ್ಪ ಬೇಸರ

ಜಿಲ್ಲೆಗಳಿಗೆ ಭೇಟಿ ನೀಡಲು ಉಸ್ತುವಾರಿ ಕಾರ್ಯದರ್ಶಿಗಳಿಗೆ ತಾಕೀತು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 1:44 IST
Last Updated 14 ಡಿಸೆಂಬರ್ 2019, 1:44 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಇದ್ದರು
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶುಕ್ರವಾರ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಇದ್ದರು   

ಬೆಂಗಳೂರು: ನೆರೆಯಿಂದ ಮನೆ ಕಳೆದುಕೊಂಡವರಿಗೆ ₹1 ಲಕ್ಷ ಬಿಡುಗಡೆಯಾಗಿದ್ದರೂ, ಬಹುಪಾಲು ಸಂತ್ರಸ್ತರು ಮನೆನಿರ್ಮಿಸಲು ಮುಂದಾಗದೆ ಇರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಇದೊಂದು ಗಂಭೀರ ಲೋಪ, ಸರ್ಕಾರ ಕೆಲಸ ಮಾಡುತ್ತಿಲ್ಲ ಎಂಬುದಕ್ಕೆ ಸಾಕ್ಷಿಯಾಗುತ್ತದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಸಮಸ್ಯೆ ಪರಿಹರಿಸಬೇಕು ಮತ್ತು ಮನೆ ನಿರ್ಮಾಣ ಆರಂಭವಾಗುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ಆಡಳಿತದಲ್ಲಿ ಚುರುಕು ತರುವ ನಿಟ್ಟಿನಲ್ಲಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆಯನ್ನುಶುಕ್ರವಾರ ವಿಧಾನಸೌಧದಲ್ಲಿ ನಡೆಸಿದ ಅವರು ಈ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ADVERTISEMENT

‘ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೆ ಇರುವುದರ ಫಲ ಇದು. ಇನ್ನು ಮುಂದೆ ಇಂತಹ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಎರಡು–ಮೂರು ದಿನಗಳೊಳಗೆ ಜಿಲ್ಲಾಧಿಕಾರಿಗಳ ಸಭೆ ಕರೆದು ಇದರ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು ಎಂದು ಹೇಳಲಾಗಿದೆ.ಭೂಕುಸಿತ ಹಾಗೂ ಇನ್ನಿತರ ಕಾರಣಗಳಿಂದ ಮನೆ ನಿರ್ಮಿಸಲು ಸಾಧ್ಯವಾ_ಗದ ಕಡೆಗಳಲ್ಲಿ ಪರ್ಯಾಯ ಜಮೀನು ಒದಗಿಸಬೇಕು ಎಂದು ಸಲಹೆ ನೀಡಿದರು.

ಬೆಳೆ ಪರಿಹಾರ: ‘ಇದುವರೆಗೆ 5.06 ಲಕ್ಷ ರೈತರಿಗೆ ₹ 785.94 ಕೋಟಿ ಬೆಳೆ ಪರಿಹಾರ ವಿತರಿಸಲಾಗಿದೆ. ಸುಮಾರು 37 ಸಾವಿರ ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿರದ ಕಾರಣ ಪರಿಹಾರ ಪಾವತಿಗೆ ಅಡಚಣೆಯಾಗಿದೆ. ಈ ಬಗ್ಗೆ ಪರ್ಯಾಯ ವಿಧಾನಗಳನ್ನು ಅನುಸರಿಸುವಂತೆ ಸೂಚನೆ ನೀಡಿ ಒಂದು ವಾರದೊಳಗೆ ಪರಿಹಾರ ಪಾವತಿ ಪೂರ್ಣಗೊಳಿಸಬೇಕು’ ಎಂದು ಅವರು ಸೂಚನೆ ನೀಡಿದರು.

‘ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಖಾತೆಗಳಿಗೆ ಜಮೆ ಆದ ಇನ್‍ಪುಟ್ ಸಬ್ಸಿಡಿ ಮತ್ತು ಬೆಳೆ ವಿಮೆ ಪರಿಹಾರ ಮೊತ್ತಗಳನ್ನು ಸಾಲ ಖಾತೆಗೆ ಜಮಾ ಮಾಡ
ಲಾಗುತ್ತಿದೆ. ಈ ಬಗ್ಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚನೆ ನೀಡಲಾಗಿದೆ. ಮತ್ತೊಮ್ಮೆ ಈ ಬಗ್ಗೆ ಲಿಖಿತ ಸೂಚನೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು’ ಎಂದು ಮೂಲಗಳು ಹೇಳಿವೆ.

ಕಾರ್ಯದರ್ಶಿಗಳು ನಿಯಮಿತವಾಗಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವರದಿಗಳನ್ನು ಆಯಾ ಸಚಿವರಿಗೆ ಸಲ್ಲಿಸಬೇಕು. ಇದರಿಂದ ಸಮಸ್ಯೆಗಳೇನಾದರೂ ಇದ್ದಲ್ಲಿ ಬಗೆಹರಿಸಲು ಸುಲಭವಾಗುತ್ತದೆ ಎಂದು ಮುಖ್ಯಮಂತ್ರಿ ತಾಕೀತು ಮಾಡಿದರು.

ಅನುದಾನ:ಎಸ್‍ಸಿಪಿ ಟಿಎಸ್‍ಪಿ ಯೋಜನೆಯಡಿ ₹30,444 ಕೋಟಿ ಅನುದಾನ ಒದಗಿಸಲಾಗಿದ್ದು, ಈವರೆಗೆ ₹11,642 ಕೋಟಿ ಬಿಡುಗಡೆಯಾಗಿದೆ, ₹ 9,667 ಕೋಟಿ ವೆಚ್ಚವಾಗಿದೆ. ಮಾರ್ಚ್ 15ರೊಳಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಅನುದಾನ ವೆಚ್ಚ ಮಾಡಲು ನಿರ್ದೇಶನ ನೀಡಿದರು.

ನೀರು ಯೋಜನೆ ವಿಫಲ

ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಲ್ಲಿ ಬಹುತೇಕ ಯೋಜನೆಗಳು ವಿಫಲವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ ಗತಿಯ ಕುರಿತು ಅಧ್ಯಯನ ವರದಿ ಹಾಗೂ ಸಲಹೆಗಳನ್ನು ಪಡೆದು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು ಎಂದು ಹೇಳಲಾಗಿದೆ.

ನೀರು ಯೋಜನೆ ವಿಫಲ

ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಲ್ಲಿ ಬಹುತೇಕ ಯೋಜನೆಗಳು ವಿಫಲವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ ಗತಿಯ ಕುರಿತು ಅಧ್ಯಯನ ವರದಿ ಹಾಗೂ ಸಲಹೆಗಳನ್ನು ಪಡೆದು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು ಎಂದು ಹೇಳಲಾಗಿದೆ.

ತೆಲಂಗಾಣದ ಮರಳು ನೀತಿ ಅಧ್ಯಯನ

ಮರಳು ದಂಧೆಯನ್ನು ನಿಯಂತ್ರಿಸುವ ಕುರಿತಂತೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ತೆಲಂಗಾಣದಲ್ಲಿನ ಮರಳು ನೀತಿ ಉತ್ತಮವಾಗಿದ್ದು, ಅಲ್ಲಿಗೆ ಹೋಗಿ ಅಧ್ಯಯನ ಮಾಡಿಕೊಂಡು ಬರುವಂತೆ ಅಧಿಕಾರಿಗಳಿಗೆ ತಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಇದುವರೆಗೆ 1.09 ಲಕ್ಷ ಮನೆ ನಿರ್ಮಾಣ

ಮೂಲಸೌಕರ್ಯ ಅಭಿವೃದ್ಧಿ: ಅರಣ್ಯ–ಕಂದಾಯ ಇಲಾಖೆಗಳೊಂದಿಗೆ ಸಭೆ ನಡೆಸಿ ತೊಡಕು ನಿವಾರಣೆ

ಬೆಂಗಳೂರಿನಲ್ಲಿ ಮಹಿಳಾ ಪೊಲೀಸರಿಂದ ರಾತ್ರಿ ಗಸ್ತು

***

ಕಾರ್ಯದರ್ಶಿಗಳು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲೆಗಳಿಗೆ ಭೇಟಿ ನೀಡಬೇಕು. ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಖುದ್ದು ಪರಿಶೀಲನೆ ನಡೆಸಬೇಕು
- ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.