ADVERTISEMENT

ಅತಂತ್ರ ಸರ್ಕಾರ ಬೇಡ, ಬಹುಮತ ನೀಡಿ: ಅಮಿತ್‌ ಶಾ ಮನವಿ

ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಭ್ರಷ್ಟ ಕಾಂಗ್ರೆಸ್‌ ಯತ್ನ: ಸಮಾವೇಶದಲ್ಲಿ ಅಮಿತ್‌ ಶಾ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2023, 19:30 IST
Last Updated 24 ಮಾರ್ಚ್ 2023, 19:30 IST
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ವಿವಿಧ ಯೋಜನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌, ಶಾಸಕ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಇದ್ದಾರೆ. –ಪ್ರಜಾವಾಣಿ ಚಿತ್ರ
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ವಿವಿಧ ಯೋಜನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌, ಶಾಸಕ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಇದ್ದಾರೆ. –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಜನರು ಅತಂತ್ರ ಸರ್ಕಾರ ಸೃಷ್ಟಿಸಬಾರದು. ಬಿಜೆಪಿಗೆ ಸಂಪೂರ್ಣ ಬಹುಮತ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸಬೇಕು’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ₹1,400 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

‘ದೇಶದಲ್ಲಿ ಕಾಂಗ್ರೆಸ್‌ ಸಂಪೂರ್ಣ ಸಮಾಪ್ತಿಯಾಗುತ್ತಿದೆ. ಎಲ್ಲ ರಾಜ್ಯಗಳು ಕಾಂಗ್ರೆಸ್‌ ಮುಕ್ತವಾಗುತ್ತಿವೆ. ಕಾಂಗ್ರೆಸ್‌ಗೆ ಹಣ ನೀಡುವ ಎಟಿಎಂ ಬೇಕು. ಹೀಗಾಗಿಯೇ ಭ್ರಷ್ಟ ಕಾಂಗ್ರೆಸ್‌ ಪಕ್ಷ ತನ್ನ ಬೊಕ್ಕಸವನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹವಣಿಸುತ್ತಿದೆ’ ಎಂದು ಟೀಕಿಸಿದರು.

ADVERTISEMENT

‘ಕಾಂಗ್ರೆಸ್‌ ಸರ್ಕಾರ ರಚಿಸಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರದ ಇತಿಹಾಸವೇ ಇದೆ. ಜತೆಗೆ, ದೇಶ ವಿರೋಧಿ ಸಂಘಟನೆಗಳಿಗೆ ಬೆಂಬಲ ನೀಡಿದೆ. ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಅವಮಾನ ಮಾಡಲಾಗಿದೆ. ಕರ್ನಾಟಕದಲ್ಲಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಿಎಫ್‌ಐ ಸಂಘಟನೆ ವಿರುದ್ಧ ದಾಖಲಾಗಿದ್ದ ಮೊಕದ್ದಮೆಗಳನ್ನು ವಾಪಸ್‌ ಪಡೆದಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಪಿಎಫ್‌ಐ ಸಂಘಟನೆ
ಯನ್ನು ನಿಷೇಧಿಸುವ ಮೂಲಕ ದಕ್ಷಿಣ ಭಾರತಕ್ಕೆ ರಕ್ಷಣೆ ನೀಡಿದರು’ ಎಂದು ಪ್ರತಿಪಾದಿಸಿದರು.

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಳೆದ 70 ವರ್ಷಗಳಿಂದಲೂ ಕಾಂಗ್ರೆಸ್‌ ಅಡ್ಡಿಪಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರೇ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಶೀಘ್ರ ನಿರ್ಮಾಣ ಕಾರ್ಯ ಮುಕ್ತಾಯ
ಗೊಳ್ಳಲಿದೆ’ ಎಂದರು. ‘ಸಮೃದ್ಧ ರಾಷ್ಟ್ರಕ್ಕಾಗಿ ಸಮಗ್ರ ಅಭಿವೃದ್ಧಿ ಎನ್ನುವ ಧ್ಯೇಯದೊಂದಿಗೆ ಶ್ರಮಿಸುತ್ತಿರುವ ಮೋದಿ ಅವರು, ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದರು. ಈ ಮೂಲಕ ಭಯೋತ್ಪಾದನೆ ಚಟುವಟಿಕೆಗಳಿಗೂ ಅಂತ್ಯ ಹಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಕರ್ನಾಟಕ ದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ನವಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಜನಪರವಾದ ಸರ್ಕಾರವನ್ನು ನೀಡಿದ್ದೇವೆ’ ಎಂದರು.

‘ಯಶವಂತಪುರ ಕ್ಷೇತ್ರದಲ್ಲಿ ಜಾತಿ-ಮತ, ಧರ್ಮದ ಆಧಾರದಲ್ಲಿ ಕೆಲವು ರಾಜಕೀಯ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಅದು ಇಲ್ಲಿ ನಡೆಯುವುದಿಲ್ಲ.
ಎಸ್‌.ಟಿ. ಸೋಮಶೇಖರ್ ಅವರು ಈ ಕ್ಷೇತ್ರದಿಂದ ಆಯ್ಕೆಯಾದ ನಂತರ ಯಶವಂತಪುರದ ನಕ್ಷೆಯೇ ಬದಲಾಗಿದೆ’ ಎಂದು ಹೇಳಿದರು.

ನಗರದ ಕೊಮ್ಮಘಟ್ಟದಲ್ಲಿ ಸಹಕಾರ ಮತ್ತು ಇತರ ಇಲಾಖೆಗಳ ಸಂಯುಕ್ತಾಶ್ರದಲ್ಲಿ ಕಾರ್ಯಕ್ರಮ ನಡೆಯಿತು.

ಪ್ರಚಾರದ ಕಾರ್ಯಕ್ರಮ

ವಿವಿಧ ಇಲಾಖೆಗಳು ಆಯೋಜಿಸಿದ್ದ ಫಲಾನುಭವಿಗಳ ಸಮಾವೇಶ ಸಂಪೂರ್ಣ ಚುನಾವಣಾ ಕಾರ್ಯಕ್ರಮದ ವೇದಿಕೆಯಾಗಿತ್ತು.

ಯಶವಂತಪುರ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್‌.ಟಿ. ಸೋಮಶೇಖರ್‌ ಅವರನ್ನು ಈ ಬಾರಿಯೂ ಬೆಂಬಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಶಾಸಕ ಬಿ.ಎಸ್‌. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದಲ್ಲಿ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.