ADVERTISEMENT

ಕ್ಷೇತ್ರದ ಕೆಲಸ ಆಗುತ್ತಿಲ್ಲ: ಸುಧಾಕರ್‌ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 12:02 IST
Last Updated 26 ಫೆಬ್ರುವರಿ 2021, 12:02 IST
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ   

ಬೆಂಗಳೂರು: ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಕ್ಷೇತ್ರದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಶುಕ್ರವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ಮೇಲೆ ಹರಿಹಾಯ್ದಿದ್ದಾರೆ.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ. ಪತ್ರ ಬರೆದರೂ ಅದಕ್ಕೆ ಪ್ರತಿಕ್ರಿಯೆ ನೀಡುತ್ತಿಲ್ಲ. ಸಚಿವ ಆಪ್ತ ಸಹಾಯಕರು ದೂರವಾಣಿ ಕರೆಯನ್ನು ಸ್ವೀಕರಿಸುತ್ತಿಲ್ಲ. ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ, ನಾವೇನು ಬಿಟ್ಟಿ ಬಿದ್ದಿದ್ದೀವಾ ಎಂದು ಕಿಡಿಕಾರಿದ್ದಾರೆ.

ಪಕ್ಷಕ್ಕೆ ವಲಸೆ ಬಂದು ಸಚಿವರಾದ ಎಲ್ಲರೂ ಹೀಗೆ ಮಾಡುತ್ತಿದ್ದಾರೆ ಎಂದು ಹೇಳುವುದಿಲ್ಲ. ಕೆಲವರು ನಮ್ಮ ಕೈಗೆ ಸಿಗುತ್ತಿಲ್ಲ ಎಂದು ಹೇಳಿದರು.

ADVERTISEMENT

ಆರೋಗ್ಯ ಸಚಿವ ಸುಧಾಕರ್‌ ಅವರನ್ನು ಹಲವು ಬಾರಿ ಭೇಟಿ ಮಾಡಿ ಹೊನ್ನಾಳಿ ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುವಂತೆ ಮನವಿ ಮಾಡಿದ್ದೇನೆ. ಪತ್ರವನ್ನೂ ಬರೆದಿದ್ದೇನೆ. ಯಾವುದೇ ಪ್ರಯೋಜನ ಆಗಿಲ್ಲ. ಇದೇ ವರ್ತನೆ ಮುಂದುವರಿದರೆ ಅರ ಕಚೇರಿ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.

ಇವತ್ತು ಪ್ರತಿಭಟನೆ ಮಾಡಬೇಕು ಅಂದುಕೊಂಡಿದ್ದೆ. ಸಚಿವರ ಆಪ್ತ ಸಹಾಯಕ ದೂರವಾಣಿ ಕರೆ ಮಾಡಿದರು. ಕೆಲವು ಕೆಲಸಗಳನ್ನು ಮಾಡಿಕೊಟ್ಟಿದ್ದಾರೆ. ಹಲವು ಶಾಸಕರ ಕೆಲಸಗಳು ಆಗಿಲ್ಲ. ಹೀಗಾಗಿ ಸುಮ್ಮನೆ ಇರುವುದಿಲ್ಲ ಎಂದು ಅವರು ತಿಳಿಸಿದರು.

ಸರ್ಕಾರದಲ್ಲಿ ಇನ್ನೂ ಐದಾರು ಸಚಿವರು ಯಾರ ಕೈಗೂ ಸಿಗುತ್ತಿಲ್ಲ. ನಾನೂ ಮೂರು ಬಾರಿ ಶಾಸಕನಾಗಿ, ಒಮ್ಮೆ ಮಂತ್ರಿಯಾಗಿದ್ದೆ. ನಾವೇನು ಬಿಟ್ಟಿ ಬಿದ್ದಿಲ್ಲ ರೇಣುಕಾಚಾರ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.