ಕಾಂಗ್ರೆಸ್
ಬೆಂಗಳೂರು: ವಿಧಾನಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಹೈಕಮಾಂಡ್ ಸೂಚಿಸಿದ ಆರತಿ ಕೃಷ್ಣ, ರಮೇಶ್ ಬಾಬು, ದಿನೇಶ್ ಅಮೀನ್‌ಮಟ್ಟು, ಡಿ.ಜಿ. ಸಾಗರ್ ಹೆಸರುಗಳಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ, ಈ ಪಟ್ಟಿಯನ್ನು ತಡೆಹಿಡಿಯಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
‘ವಿಧಾನಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನಗೊಂಡವರ ಪಟ್ಟಿ ಇನ್ನೂ ರಾಜಭವನಕ್ಕೆ ತಲುಪಿಲ್ಲ’ ಎಂದು ರಾಜಭವನದ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.
ಈ ಮಧ್ಯೆ, ನಾಮನಿರ್ದೇಶನ ಮಾಡಲು ಅನುಮೋದಿಸಿರುವ ಹೆಸರುಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್‌ನ ಕೆಲವು ನಾಯಕರು ಪಕ್ಷದ ವರಿಷ್ಠರಿಗೆ ದೂರು ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಾ ಈ ಪಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.
‘ರಮೇಶ್ ಬಾಬು ಮತ್ತು ಡಿ.ಜಿ. ಸಾಗರ್ ಅವರು ಜೆಡಿಎಸ್‌ನಲ್ಲಿ ಇದ್ದವರು. ರಮೇಶ್ ಬಾಬು ಅವರು ಮೂರು ವರ್ಷಗಳ ಹಿಂದೆಯಷ್ಟೆ ಪಕ್ಷಕ್ಕೆ ಬಂದಿದ್ದಾರೆ. ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆಯಾಗಿರುವ ಆರತಿ ಕೃಷ್ಣ ಮತ್ತು ಸಿದ್ದರಾಮಯ್ಯ ಅವರಿಗೆ 2013–18ರವರೆಗೆ ಮಾಧ್ಯಮ ಸಲಹೆಗಾರರಾಗಿದ್ದ ದಿನೇಶ್ ಅಮೀನ್‌ಮಟ್ಟು ಅವರು ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡವರಲ್ಲ. ಹೀಗಾಗಿ, ವಿಧಾನ ಪರಿಷತ್‌ಗೆ ಈ ನಾಲ್ವರನ್ನು ನಾಮನಿರ್ದೇಶನ ಮಾಡುವುದರಲ್ಲಿ ಯಾವುದೇ ಅರ್ಥ ಇಲ್ಲ’ ಎಂದು ಕಾಂಗ್ರೆಸ್‌ನ ಕೆಲವು ನಾಯಕರು ಡಿ.ಕೆ. ಶಿವಕುಮಾರ್ ಬಳಿ ದೂರಿದ್ದಾರೆ ಎಂದೂ ಗೊತ್ತಾಗಿದೆ.
‘ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದವರನ್ನು ಗುರುತಿಸಿ ಅವಕಾಶ ನೀಡಬೇಕೆಂದು ರಾಹುಲ್ ಗಾಂಧಿ ಆಗಾಗ ಹೇಳುತ್ತಾರೆ. ಪಕ್ಷಕ್ಕಾಗಿ ದುಡಿದ 20ಕ್ಕೂ ಹೆಚ್ಚು ನಾಯಕರು ವಿಧಾನ ಪರಿಷತ್‌ನ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೂಚಿಸಿದ್ದ ಹೆಸರುಗಳನ್ನೂ ಗಣನೆಗೆ ತೆಗೆದುಕೊಳ್ಳದೆ ಆಯ್ಕೆ ನಡೆದಿದೆ. ಹೀಗಾಗಿ, ಈ ಪಟ್ಟಿಯನ್ನು ತಡೆಹಿಡಿಯುವಂತೆ ಪಕ್ಷದ ಕೆಲವು ನಾಯಕರು ಒತ್ತಡ ಹೇರುತ್ತಿರುವುದು ನಿಜ’ ಎಂದು ಕೆಪಿಸಿಸಿ ಪದಾಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.