ADVERTISEMENT

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರಿಸಬೇಕು: ಡಿ.ಕೆ ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 7:20 IST
Last Updated 8 ಡಿಸೆಂಬರ್ 2025, 7:20 IST
<div class="paragraphs"><p>ಡಿ.ಕೆ ಶಿವಕುಮಾರ್, ಉಪಮುಖ್ಯಮಂತ್ರಿ</p></div>

ಡಿ.ಕೆ ಶಿವಕುಮಾರ್, ಉಪಮುಖ್ಯಮಂತ್ರಿ

   

ಬೆಂಗಳೂರು: ‘ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಕೇಂದ್ರ ಸರ್ಕಾರದ ಪಾಲೇನು, ಇದರ ತೀರ್ಮಾನ ಮಾಡುವವರು ಯಾರು’ ಎಂದು ಪ್ರಶ್ನಿಸಿದರು.

ADVERTISEMENT

‘ಪ್ರತಿಯೊಂದಕ್ಕೂ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ, ಈವರೆಗೆ ಈ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪರಿಹಾರ ನೀಡಲೆಂದೇ ನಾವಿದ್ದೇವೆ. ಇದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಇದೆಯಲ್ಲವೇ? ಇಲ್ಲಿಯವರೆಗೂ ಬೊಮ್ಮಾಯಿ ಅವರು ಯಾಕೆ ಸಂಸತ್ತಿನಲ್ಲಿ ಈ ವಿಚಾರವಾಗಿ ಧ್ವನಿ ಎತ್ತಿಲ್ಲ? ಪ್ರಧಾನಿ ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ’ ಎಂದೂ ಕೇಳಿದರು.

ನೀರಾವರಿ ಸಮಸ್ಯೆ ಹಾಗೂ ಯೋಜನೆ ಅನುಷ್ಠಾನವಾಗದಿರುವ ಬಗ್ಗೆ ಕೇಳಿದಾಗ, ‘ನನ್ನ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಮಾಡಿದಷ್ಟು ಯೋಜನೆ ಇಲಾಖೆಯ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ವಿರೋಧ ಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿ, ಅಲ್ಲಿ ಉತ್ತರಿಸುತ್ತೇನೆ’  ಎಂದರು.

‘ಕಾಂಗ್ರೆಸ್‌ನಲ್ಲಿ ಸಚಿವರಾಗಬೇಕಾದರೆ ₹ 500 ಕೋಟಿ ನೀಡಬೇಕು’ ಎಂಬ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ಈ ರೀತಿ ಹೇಳಿದವರನ್ನು ಹುಚ್ಚಾಸ್ಪತ್ರೆಗೆ ಸೇರಿಸೋಣ’ ಎಂದರು